ಸ್ಫೋಟದಿಂದ ಬಿಜೆಪಿಗೆ ರಾಜಕೀಯ ಲಾಭ: ಕಾಂಗ್ರೆಸ್
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ಬುಧವಾರ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲೂ ರಾಜಕೀಯ ಸ್ಫೋಟಗೊಂಡಿದ್ದು,
ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ಬುಧವಾರ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದಲ್ಲೂ ರಾಜಕೀಯ ಸ್ಫೋಟಗೊಂಡಿದ್ದು, ಸ್ಫೋಟದಿಂದ ಬಿಜೆಪಿಗೆ ರಾಜಕೀಯವಾಗಿ ಲಾಭವಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ವಕ್ತಾರ ಶಕೀಲ್ ಅಹಮದ್ ಅವರು ಹೇಳಿದ್ದಾರೆ.
ಸ್ಫೋಟಕ್ಕೆ ಟ್ವೀಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ, ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಸಂಭವಿಸಿದ ಬಾಂಬ್ ಸ್ಫೋಟದ ಹಿಂದೆ ಉಗ್ರರ ಕೈವಾಡ ಇರುವುದು ನಿಜವಾದರೆ, ಇದು ಬಿಜೆಪಿಗೆ ರಾಜಕೀಯವಾಗಿ ಲಾಭವಾಗಲಿದೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜನರಿಂದ ಸಿಂಪಥಿ ಗಿಟ್ಟಿಸಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ಶಕೀಲ್ ಅಹಮದ್ ಹೇಳಿಕೆಗೆ ಬಿಜೆಪಿ ಖಂಡನೆ
ಶಕೀಲ್ ಅಹಮದ್ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಭಯೋತ್ಪದನೆ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ವಕ್ತಾರ ಶಹನವಾಜ್ ಹುಸೇನ್ ಅವರು ಆರೋಪಿಸಿದ್ದಾರೆ. ಅಲ್ಲದೆ ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ ಅವರು ಸ್ಪಷ್ಟಿಕರಣ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸ್ಫೋಟದ ಸುದ್ದಿ ತಿಳಿದು ತೀವ್ರ ಆಘಾತವಾಯಿತು ಎಂದಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಇದು ಮಾಮೂಲಿ ಪ್ರಕರಣವಲ್ಲ. ಇದೊಂದು ಅತೀ ಸೂಕ್ಷ್ಮ ಪ್ರಕರಣ. ಹೀಗಾಗಿ ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸೂಕ್ತ ತನಿಖೆ ನಡಸಬೇಕು ಎಂದಿದ್ದಾರೆ.
ಇನ್ನು ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಗುಪ್ತಚರ ಇಲಾಖೆಯ ವೈಫಲ್ಯವೇ ಘಟನೆಗೆ ಕಾರಣ ಎಂದು ಹೇಳಿದ್ದಾರೆ.