ನಾನು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿ: ಸಿದ್ಧರಾಮಯ್ಯ
ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ಕಾಂಗ್ರೆಸ್ ಮುಖಂಡ ಹಾಗು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ಕೊಪ್ಪಳ: ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ ಎಂದು ಕಾಂಗ್ರೆಸ್ ಮುಖಂಡ ಹಾಗು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಕಾಂಗ್ರೆಸ್ ಪರ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಸಿದ್ಧರಾಮಯ್ಯ, 'ತಾವು ಕೂಡ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದೇವೆ. ಆದರೆ ಅಂತಿಮ ನಿರ್ಧಾರ ಮಾತ್ರ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಕಾರ್ಯಕರ್ತರ ಒಲವನ್ನು ಆಧರಿಸಿ, ಪಕ್ಷದ ವರಿಷ್ಟರು ಮುಖ್ಯಮಂತ್ರಿ ಯಾರಾಗಬೇಕು ಎಂದು ತೀರ್ಮಾನಿಸಲಿದ್ದಾರೆ' ಎಂದು ಅವರು ಹೇಳಿದರು.
'ಈಗಾಗಲೇ ಜನರಲ್ಲಿ ಕಾಂಗ್ರೆಸ್ ಪರ ಒಲವು ಮೂಡುತ್ತಿದೆ. ಬಿಜೆಪಿ ಸರ್ಕಾರದ ಜನವಿರೋಧಿ ಧೋರಣೆಯಿಂದ ಜನ ಬೇಸತ್ತಿದ್ದಾರೆ. ಹೀಗಾಗಿ ಪ್ರಸಕ್ತ ಚುನಾವಣೆಯಲ್ಲಿ ತಾವು ಶೇ.ನೂರಕ್ಕೆ ನೂರರಷ್ಟು ಗೆಲುವು ಸಾಧಿಸುತ್ತೇವೆ' ಎಂದು ಸಿದ್ಧರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅಧಿಕಾರದ ಕನಸು ಕಾಣುತ್ತಿರುವ ಕಾಂಗ್ರೆಸ್, ಶತಾಯಗತಾಯ ಸರ್ಕಾರದ ಚುಕ್ಕಾಣಿ ಹಿಡಿಯಬೇಕು ಎಂದು ಹವಣಿಸುತ್ತಿದೆ. ಅಂತೆಯೇ ಪಕ್ಷದಲ್ಲಿ ಮುಖ್ಯಮಂತ್ರಿ ಪದವಿ ಆಕಾಂಕ್ಷಿಗಳ ಸಂಖ್ಯೆ ದಿನೇ ದಿನೇ ಏರುತ್ತಿದ್ದು, ನಿನ್ನೆಯಷ್ಟೇ ಕಾಂಗ್ರೆಸ್‌ನ ಹಿರಿಯ ಮುಖಂಡ ಶ್ಯಾಮನೂರು ಶಿವ ಶಂಕರಪ್ಪ ಅವರೂ ಸಹ ತಾವು ಮುಖ್ಯಮಂತ್ರಿ ಪದವಿಯ ಆಕಾಂಕ್ಷಿ ಎಂದು ಹೇಳಿದ್ದರು.