ರಾಜ್ಯದಲ್ಲಿ ಮೋದಿ ಪ್ರಚಾರ; ಒಂದೇ ಸಭೆಗೆ ಸೀಮಿತ
ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರು ಕೇವಲ ಒಂದು ಸಾರ್ವಜನಿಕ ಸಭೆಯಲ್ಲಿ ಮಾತ್ರ ಪಾಲ್ಗೊಳ್ಳಲ್ಲಿದ್ದಾರೆ.
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಪ್ರಚಾರದ ಪ್ರಮುಖ ಆಕರ್ಷಣೆ ಎಂದೇ ಬಿಂಬಿತರಾಗಿದ್ದ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಅವರು ಕೇವಲ ಒಂದೇ ಸಾರ್ವಜನಿಕ ಸಭೆಯಲ್ಲಿ ಮಾತ್ರ ಪಾಲ್ಗೊಳ್ಳಲ್ಲಿದ್ದಾರೆ.
ಮೇ 5ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಯುಕ್ತ ನರೇಂದ್ರಮೋದಿ ಅವರು, ಬೆಂಗಳೂರಿನಲ್ಲಿ ನಡೆಯಲಿರುವ ಒಂದು ಸಾರ್ವಜನಿಕ ಸಭೆ ಮತ್ತು ರ್ಯಾಲಿಯಲ್ಲಿ ಮಾತ್ರ ಪಾಲ್ಗೊಳ್ಳಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುಜಾರಾತ್ ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಮೋದಿ ಅವರು, ರಾಜ್ಯ ಪ್ರವಾಸವನ್ನು ಮೊಟಕುಗೊಳಿಸಿದ್ದಾರೆ. ಹೀಗಾಗಿ ಅವರು ರಾಜ್ಯ ಪ್ರವಾಸ ಮಾಡುವುದು ಅಸಾಧ್ಯವಾಗಿದೆ. ಆದ್ದರಿಂದಲೇ ಮೋದಿ ಅವರು ಒಂದು ದಿನದ ಮಟ್ಟಿಗೆ ಬೆಂಗಳೂರಿಗೆ ಆಗಮಿಸಿ ಪಕ್ಷದ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಮೋದಿ ಆಗಮನ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅವರು, ಮೋದಿ ಅವರೊಂದಿಗೆ ನಾವು ಈಗಾಗಲೇ ಚರ್ಚಿಸಿದ್ದೇವೆ. ಇದೇ ಭಾನುವಾರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಮೋದಿ ಮತ್ತು ಅಡ್ವಾಣಿ ಅವರು ಪ್ರಚಾರ ನಡೆಸುವಂತೆ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ, ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರು ಮನವಿ ಮಾಡಿದ್ದರು. ಅಲ್ಲದೆ ವಿವಿಧ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು, ಮೋದಿ ಅವರು ತಮ್ಮ ಕ್ಷೇತ್ರಕ್ಕೆ ಆಗಮಿಸಿ ತಮ್ಮ ಪರವಾಗಿ ಮತಯಾಚನೆ ಮಾಡಬೇಕೆಂದು ರಾಜ್ಯ ನಾಯಕರ ಮೇಲೆ ಒತ್ತಡ ಹೇರಿದ್ದರು.
ಹೀಗಾಗಿ ಬಿಜೆಪಿ ಪಕ್ಷದ ವರಿಷ್ಠ ಎಲ್.ಕೆ.ಅಡ್ವಾಣಿ ಮತ್ತು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು, ಬಿಜೆಪಿ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಮಾತ್ರ ಪ್ರಚಾರ ನಡೆಸಲು ಸಮ್ಮತಿ ಸೂಚಿಸಿದ್ದರು. ಅದರಂತೆ ಎಲ್.ಕೆ. ಅಡ್ವಾಣಿ ಅವರು ಹುಬ್ಬಳ್ಳಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದರು. ಅಂತೆಯೇ ಲೋಕಸಭೆಯ ವಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಅವರು ಕೂಡ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಆದರೆ ನರೇಂದ್ರ ಮೋದಿ ಅವರು ಮಾತ್ರ ಒಂದು ದಿನದ ಮಟ್ಟಿಗೆ ಮಾತ್ರ ಬೆಂಗಳೂರಿಗೆ ಆಗಮಿಸಿ ಪ್ರಚಾರ ನಡೆಸಲಿದ್ದಾರೆ.