ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಸ್ಸಾಂನಲ್ಲಿ ಗೋಲಿಬಾರ್; ಇಬ್ಬರ ಸಾವು

ಅಸ್ಸಾಂನಲ್ಲಿ ನಡೆದ ಘರ್ಷಣೆಯನ್ನು ತಡೆಯಲು ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪಿದ್ದಾರೆ.

Srinivasa Murthy VN
Updated On : 29 Apr 2013, 6:06 am

ಗೋಲ್‌ಪುರ: ಅಸ್ಸಾಂನಲ್ಲಿ ನಡೆದ ಘರ್ಷಣೆಯನ್ನು ತಡೆಯಲು ಪೊಲೀಸರು ನಡೆಸಿದ ಗೋಲಿಬಾರ್‌ನಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪಿದ್ದಾರೆ.

ಅಸ್ಸಾಂನ ಗೋಲ್‌ಪುರ ಜಿಲ್ಲೆಯ ಮಲೈಪಥಾರ್ ಎಂಬ ಗ್ರಾಮದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಸಂಭವಿಸಿದ್ದು, ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಸ್ಥಳೀಯರು ಮೃತಪಟ್ಟಿದ್ದಾರೆ. ಅಲ್ಲದೆ ಇಬ್ಬರು ಪೊಲೀಸ್ ಸಿಬ್ಬಂದಿಗಳು ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದನ ಕಾಯುವ 50 ವರ್ಷದ ವ್ಯಕ್ತಿಯೊಬ್ಬ ನಿನ್ನೆ ನಾಪತ್ತೆಯಾಗಿ ಇಂದು ಮಲೈಪಥಾರ್ ಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದನು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಆತನ ಸಂಬಂಧಿಕರು ಇದು ಕೊಲೆ ಎಂದು ಬೊಬ್ಬೆ ಇಟ್ಟರು. ಈ ವೇಳೆಗಾಗಲೇ ಮೃತನ ಸ್ವಗ್ರಾಮದಿಂದ ಸಾವಿರಾರು ಮಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದರು. ಘಟನೆಯನ್ನು ಖಂಡಿಸಿ ಕೆಲಮಂದಿ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು.

ಪರಿಸ್ಥಿತಿ ನಿಭಾಯಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದಾಗ ಉದ್ರಿಕ್ತಗೊಂಡ ಜನರು ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಅವರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಕೆಲ ಕಿಡಿಗೇಡಿಗಳು ದೊಣ್ಣೆಗಳು ಮತ್ತು ಕಲ್ಲುಗಳಿಂದ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದು, ತಡೆಯಲು ಬಂದ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಮನಬಂದಂತೆ ಥಳಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಬೇರೆ ದಾರಿ ಕಾಣದೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾರೆ. ಆಗ ಇಬ್ಬರು ವ್ಯಕ್ತಿಗಳು ಗುಂಡೇಟಿಗೆ ಬಲಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗ್ರಾಮದಲ್ಲಿ ಇದೀಗ ಪ್ರಕ್ಷುಬ್ಧ ವಾತಾವರಣ ನೆಲೆಸಿದ್ದು, ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸಿ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ತುರ್ತು ಪರಿಸ್ಥಿತಿ ನಿರ್ವಹಣಾ ಘಟಕದ ಸಿಬ್ಬಂದಿಗಳು ಗ್ರಾಮದಲ್ಲಿ ಪಹರೆ ನಡೆಸುತ್ತಿದ್ದಾರೆ. ಘಟನೆಯ ಕುರಿತು ವರದಿ ನೀಡುವಂತೆ ಸ್ಥಳೀಯ ನ್ಯಾಯಾಧೀಶರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement