ಕಲ್ಲಿದ್ದಲು ಹಗರಣ; ಕ್ರಮ ಕೈಗೊಳ್ಳುತ್ತೇವೆ: ಪ್ರಧಾನಿ
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಹಸ್ತಕ್ಷೇಪದ ಬಗ್ಗೆ ಸುಪ್ರೀಂಕೋರ್ಟ್ ಪ್ರಶ್ನಿಸಿದ್ದರಿಂದ ಯುಪಿಎ ಸರ್ಕಾರಕ್ಕೆ ಮುಖಭಂಗವಾಗಿದ್ದು...
ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಹಸ್ತಕ್ಷೇಪದ ಬಗ್ಗೆ ಸುಪ್ರೀಂಕೋರ್ಟ್ ಪ್ರಶ್ನಿಸಿದ್ದರಿಂದ ಯುಪಿಎ ಸರ್ಕಾರಕ್ಕೆ ಮುಖಭಂಗವಾಗಿದ್ದು, ಪಕ್ಷದ ಹಿರಿಯ ಮುಖಂಡರೊಂದಿಗೆ ಚರ್ಚಿಸಿ ಕೂಡಲೆ ಕ್ರಮ ಕೈಗೊಳ್ಳುವುದಾಗಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನ ತನಿಖಾ ವರದಿಯಲ್ಲಿ ಸರ್ಕಾರದ ಹಸ್ತಕ್ಷೇಪದ ಕುರಿತು ಸುಪ್ರೀಂ ಸರ್ಕಾರವನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡಿತ್ತು. ಇದರಿಂದ ಯುಪಿಎ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿತ್ತು. ಕೂಡಲೇ ಎಚ್ಚೆತ್ತುಕೊಂಡಿರುವ ಪ್ರಧಾನಿ ಸಿಂಗ್ ಅವರು ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಸುಪ್ರೀಂ ತೀರ್ಪು ಸಂಸತ್‌ನಲ್ಲೂ ಪ್ರತಿಧ್ವನಿಸಿದ್ದು, ಲೋಕಸಭೆ ಅಧಿವೇಶನದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಯಿತು. ವಿಪಕ್ಷಗಳು ಸರ್ಕಾರದ ಧೋರಣೆಯನ್ನು ಖಂಡಿಸಿದವು. ಇದರಿಂದ ಲೋಕಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ತೀವ್ರ ಮುಜುಗರವಾಯಿತು.
ನ್ಯಾಯಾಲಯದಲ್ಲಿ ವಿಚಾರಣೆ ಮುಗಿಯುತ್ತಿದ್ದಂತೆ, ಸಿಬಿಐ ಪ್ರಧಾನ ಕಚೇರಿಯಲ್ಲಿ ತುರ್ತು ಸಭೆ ನಡೆಸಲಾಯಿತು. ಸಭೆಯ ನಂತರ ಮಾತನಾಡಿದ ಸಿಬಿಐ ಮುಖ್ಯಸ್ಥ ರಂಜಿತ್ ಸಿನ್ಹಾ
ಅವರು ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ನಾನು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಹೇಳಿದ್ದಾರೆ.