ಶೂಟಿಂಗ್ ವೇಳೆ ನಟ ದರ್ಶನ್ಗೆ ಗಾಯ, ಆಸ್ಪತ್ರೆಗೆ ದಾಖಲು
ಕೆ. ಮಾದೇಶ್ ನಿರ್ದೇಶನದ 'ಬೃಂದಾವನ' ಚಿತ್ರದ ಫೈಟಿಂಗ್ ದೃಶ್ಯದ ಚಿತ್ರೀಕರಣದ ವೇಳೆ ಚಿತ್ರದ ನಾಯಕ ನಟ..
ಬೆಂಗಳೂರು: ಕೆ. ಮಾದೇಶ್ ನಿರ್ದೇಶನದ 'ಬೃಂದಾವನ' ಚಿತ್ರದ ಫೈಟಿಂಗ್ ದೃಶ್ಯದ ಚಿತ್ರೀಕರಣದ ವೇಳೆ ಚಿತ್ರದ ನಾಯಕ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅವರ ತಲೆ ಹಾಗೂ ಭುಜಕ್ಕೆ ಪೆಟ್ಟಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಫೈಟಿಂಗ್ ದೃಶ್ಯ ಚಿತ್ರೀಕರಿಸುತ್ತಿದ್ದ ವೇಳೆ ದರ್ಶನ್ ಕುದುರೆಯಿಂದ ಬಿದ್ದ ಪರಿಣಾಮ ತಲೆ ಹಾಗೂ ಭುಜಕ್ಕೆ ಪೆಟ್ಟಾಗಿತ್ತು. ಆದರೆ ನಿನ್ನೆ ರಾತ್ರಿ ಅವರಿಗೆ ಹೆಚ್ಚು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಬೆಳಗ್ಗೆ ದರ್ಶನ್ ಅವರ ತಾಯಿ ಮೀನಾ ತೂಗುದೀಪ್ ಹಾಗೂ ನಟ ಸುದೀಪ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಸುದೀಪ್, ನಾನು ದರ್ಶನ್ ಜತೆಗೆ ಆಸ್ಪತ್ರೆಯಲ್ಲೇ ಇದ್ದೇನೆ, ದರ್ಶನ್ ಅವರಿಗೆ ಎಂಆರ್ಐ ಸ್ಕ್ಯಾನ್ ಮಾಡಲಾಗಿದೆ. ಸ್ಕ್ಯಾನಿಂಗ್ನಲ್ಲಿ ಎಲ್ಲ ನಾರ್ಮಲ್ ಎಂದು ಗೊತ್ತಾಗಿದೆ. ಹೀಗಾಗಿ ಅವರಿಗೆ ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ ದರ್ಶನ್ ಅಭಿಮಾನಿಗಳು ಆತಂಕ ಪಡುವ ಅಗತ್ಯ ಇಲ್ಲ. ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎಂದು ಸುದೀಪ್ ಹೇಳಿದ್ದಾರೆ.
ಇನ್ನು ದರ್ಶನ್ ಅವರ ಆರೋಗ್ಯದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಆಸ್ಪತ್ರೆಯ ಉಪಾಧ್ಯಕ್ಷ ಡಾ.ವೆಂಕಟರಮಣ ಅವರು, ಶೂಟಿಂಗ್ ವೇಳೆ ಗಾಯಗೊಂಡಿದ್ದ ನಟ ದರ್ಶನ್ ಅವರು ಇಂದು ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಆಸ್ಪತ್ರೆ ದಾಖಲಾಗಿದ್ದಾರೆ. ಕತ್ತಿನ ಭಾಗದಲ್ಲಿ ಉಳುಕಿದಂತಾಗಿ ಅವರಿಗೆ ನೋವು ಕಾಣಿಸಿಕೊಂಡಿದೆ. ಅದಕ್ಕೆ ನಾವು ಸೂಕ್ತ ಚಿಕಿತ್ಸೆ ನೀಡಿದ್ದು, ಸಂಜೆ ವೇಳೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಆದರೆ ಅವರಿಗೆ ಎರಡು ವಾರಗಳ ವಿಶ್ರಾಂತಿಯ ಅಗತ್ಯ ಇದೆ ಎಂದು ತಿಳಿಸಿದ್ದಾರೆ.