'ಮಂಡ್ಯ ರಮ್ಯ' ನಾಮಪತ್ರ ಸಲ್ಲಿಕೆ
ಸ್ಯಾಂಡಲ್ವುಡ್ ಮೋಹಕ ನಟಿ ರಮ್ಯ ಅವರು ಶನಿವಾರ ಮಂಡ್ಯ ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ಮಂಡ್ಯ: ಸ್ಯಾಂಡಲ್ವುಡ್ ಮೋಹಕ ನಟಿ ರಮ್ಯ ಅವರು ಶನಿವಾರ ಮಂಡ್ಯ ಲೋಕಸಭಾ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಮಂಡ್ಯಕ್ಕೆ ಆಗಮಿಸಿದ ರಮ್ಯ, ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಸತಿ ಸಚಿವ ಅಂಬರೀಷ್ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಸಿಎಂ, ಮಂಡ್ಯ ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಟ್ಟಾಗಿ ಈ ಉಪ ಚುನಾವಣೆ ಎದುರಿಸುತ್ತೇವೆ. ರಮ್ಯ ಅವರು ಮೂಲತ ಮಂಡ್ಯ ಜಿಲ್ಲೆಯವರು. ಹೀಗಾಗಿ ಹೈಕಮಾಂಡ್ ಅವರಿಗೆ ಟಿಕೆಟ್ ನೀಡಿದೆ. ಈ ಎರಡೂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಯಿಂದ ದೊರೆಸ್ವಾಮಿ ನಾಮಪತ್ರ ಸಲ್ಲಿಕೆ
ಬಿಜೆಪಿ ಅಭ್ಯರ್ಥಿಯಾಗಿ ದೊರೆಸ್ವಾಮಿ ಅವರು ಮಂಡ್ಯ ಲೋಕಸಭೆ ಉಪ ಚುನಾವಣೆಗೆ ಇಂದು ತಮ್ಮ ಪತ್ರ ಸಲ್ಲಿಸಿದರು.
ಇನ್ನು ಜೆಡಿಎಸ್ನಿಂದ ಸಿ.ಎಸ್.ಪುಟ್ಟರಾಜು ಅವರು ಗುರುವಾರವೇ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಬೆಂಬಲಗರೊಂದಿಗೆ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಆಗಮಿಸಿದ ಪುಟ್ಟರಾಜು, ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಅವರಿಗೆ ಉಮೇದುವಾರಿಕೆ ಸಲ್ಲಿಸಿದ್ದರು.