ಉಪ ಸಮರ: ಬೆ.ಗ್ರಾ ಅಭ್ಯರ್ಥಿ ನಾಮಪತ್ರ ವಾಪಸ್ ಗೆ ಬಿಜೆಪಿ ನಿರ್ಧಾರ
ಉಪ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ, ಬೆಂ. ಗ್ರಾಮಾಂತರ ಅಭ್ಯರ್ಥಿಯ ನಾಮಪತ್ರ ಹಿಂಪಡೆಯಲು ನಿರ್ಧರಿಸಿದೆ.
ಬೆಂಗಳೂರು: 2 ಸ್ಥಾನಗಳಿಗೆ ನಡೆಯುತ್ತಿರುವ ಲೋಕಸಭಾ ಉಪ ಚುನಾವಣೆಯಲ್ಲಿ ಒಂದು ಕ್ಷೇತ್ರದಲ್ಲಿ ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ, ತನ್ನ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ನಾಮಪತ್ರವನ್ನು ಹಿಂಪಡೆಯಲು ನಿರ್ಧರಿಸಿದೆ.
ಲೋಕಸಭಾ ಉಪ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಪ್ರಮುಖ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿ ಅಡಳಿತಾರೂಢ ಕಾಂಗ್ರೆಸ್ ಅನ್ನು ಮಣಿಸಲ ಸಿದ್ಧತೆ ನಡೆಸಿವೆ. ಇದರ ಅಂಗವಾಗಿ ನಾಳೆ ಬಿಜೆಪಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯ ನಾಮಪತ್ರವನ್ನು ಹಿಂಪಡೆಯಲಿದೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಪಕ್ಷದ ಪರವಾಗಿ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಆರ್.ಮುನಿರಾಜು ಮತ್ತು ಬಿ.ನಾಗರಾಜು ಎಂಬುವವರ ನಾಮಪತ್ರಗಳು ತಿರಸ್ಕೃತಗೊಂಡಿದ್ದವು. ಬಿಜೆಪಿ ಪಕ್ಷದ ಪರವಾಗಿ ಎಂ.ಕೃಷ್ಣಪ್ಪ ಎಂಬುವವರ ನಾಮಪತ್ರ ಮಾತ್ರ ಅಂಗೀಕೃತವಾಗಿತ್ತು. ಅವರು ಕೂಡ ನಾಳೆ ತಮ್ಮ ನಾಮಪತ್ರವನ್ನು ಹಿಂಪಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.