ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾಶ್ಮೀರ ಗಲಭೆ: ವರದಿ ಕೇಳಿದ ಕೇಂದ್ರ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರದಲ್ಲಿ ಕಳೆದ ಶುಕ್ರವಾರ ಸಂಭವಿಸಿದ ಗಲಭೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ...

Vishwanath S
Updated On : 12 Aug 2013, 4:18 am

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರದಲ್ಲಿ ಕಳೆದ ಶುಕ್ರವಾರ ಸಂಭವಿಸಿದ ಗಲಭೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಸೋಮವಾರ ಕೇಂದ್ರ ಸರ್ಕಾರ ಸೂಚಿಸಿದೆ.

ಕಿಶ್ತ್‌ವಾರ್‌ನಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಗಲಭೆಗೆ ಕಾರಣವಾದ ನಿಕರ ಮಾಹಿತಿ ನೀಡುವಂತೆ ಜಮ್ಮು ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಆರ್.ಪಿ.ಎನ್ ಸಿಂಗ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಈ ಸಂಬಂಧ ಜಮ್ಮು ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಗಲಭೆಗೆ ಕಾರಣ ತಿಳಿಸುವಂತೆ ಸೂಚಿಸಲಾಗಿದೆ ಎಂದರು.

ಇದೇ ವೇಳೆ, ಕಿಶ್ತ್‌ವಾರ್‌ನ ಗಲಭೆಯಲ್ಲಿ ಭಾಗಿಯಾಗಿದ್ದ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಜಮ್ಮು ಸರ್ಕಾರ ತಿಳಿಸಿರುವುದಾಗಿ ಸಿಂಗ್ ಹೇಳಿದರು.

ಈ ಮಧ್ಯೆ, ಭಾನುವಾರ ರಾಜ್ಯಸಭೆ ಪ್ರತಿಪಕ್ಷದ ನಾಯಕ ಅರುಣ್ ಜೇಟ್ಲಿ ಅವರ ಕಿಶ್ತ್‌ವಾರ್ ಭೇಟಿಯನ್ನು ತಡೆದಿರುವ ಬಗ್ಗೆ ರಾಜ್ಯ ಸರ್ಕಾರ ವಿವರಣೆ ನೀಡಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಮಲ್ ನಾಥ್ ತಿಳಿಸಿದ್ದಾರೆ. ಅಲ್ಲದೆ ಹಿಂಸಾಚಾರಕ್ಕೆ ಒಳಗಾಗಿದ್ದ ಪ್ರದೇಶಕ್ಕೆ ಜೇಟ್ಲಿ ಹೋಗಿದ್ದಾದರೂ ಏಕೆ ಎಂಬುದು ತಮಗೆ ತಿಳಿದಿಲ್ಲ ಎಂದಿದ್ದಾರೆ.

ಕಿಶ್ತ್‌ವಾರ್ ಗಲಭೆಗೆ ಪ್ರಕರಣ ಇಂದು ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ಗಲಭೆ ಕುರಿತಂತೆ ಸ್ಪಷ್ಟನೆ ನೀಡುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ವಿಪಕ್ಷಗಳ ಗದ್ದಲದಿಂದಾಗಿ ಉಭಯ ಸದನಗಳ ಕಲಾಪವನ್ನು ಮುಂದೂಡಬೇಕಾಯಿತು.

ಚಿದಂಬರಂ ಸ್ಪಷ್ಟನೆ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ ಗಲಭೆ ಪ್ರಕರಣದಲ್ಲಿ ರಾಜಕೀಯ ಬೇಡ ಎಂದು ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರು ಹೇಳಿದರು. ಕೋಮು ಗಲಭೆಯಿಂದಾಗಿ ಮೃತಪಟ್ಟವರು ಹಿಂದೂ ಅಥವಾ ಮುಸ್ಲೀಮರಲ್ಲ 'ಭಾರತೀಯರು' ಎಂದರು.

ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ಚಿದಂಬರಂ ಅವರು, ಕಿಶ್ತ್‌ವಾರನಲ್ಲಿ ಸಂಭವಿಸಿದ ಗಲಭೆಯಿಂದಾಗಿ ಜಮ್ಮು-ಕಾಶ್ಮೀರ ಹೊತ್ತಿ ಉರಿದಿದ್ದು, ಇಂತಹ ಪರಿಸ್ಥಿತಿಯನ್ನು ರಾಜಕೀಯ ಪಕ್ಷಗಳು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳಲು ಹವಣಿಸುತ್ತಿರುವುದು ಸರಿಯಲ್ಲ. ಈ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದರು. ಅಲ್ಲದೆ ಸದ್ಯ ಕಿಶ್ತ್‌ವಾರ್‌ನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸದನಕ್ಕೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement