'ಅನ್ನಭಾಗ್ಯ': ಕಮಿಷನ್ ಹೆಚ್ಚಳಕ್ಕೆ ಆಗ್ರಹ
ಅಕ್ಕಿ, ಗೋಧಿ, ಸಕ್ಕರೆಯ ಮೇಲಿನ ಕಮಿಷನ್ ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂದು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘ ಆಗ್ರಹಿಸಿದೆ.
ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿಯಲ್ಲಿ ವಿತರಿಸುತ್ತಿರುವ ಪದಾರ್ಥಗಳ ಮೇಲಿನ ಕಮಿಷನ್ ಪ್ರಮಾಣವನ್ನು ಹೆಚ್ಚಳ ಮಾಡಬೇಕು ಎಂದು ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಬೆಂಗಳೂರಿನಲ್ಲಿ ಇಂದು ಸಭೆ ಸೇರಿದ್ದ ನ್ಯಾಯಬೆಲೆ ಅಂಗಡಿ ಮಾಲೀಕರು, ಅನ್ನಭಾಗ್ಯ ಯೋಜನೆ ಅಡಿಯಲ್ಲಿ ವಿತರಿಸಲಾಗುತ್ತಿರುವ ಅಕ್ಕಿ, ಗೋಧಿ ಮತ್ತು ಸಕ್ಕರೆಯ ಮೇಲೆ ನೀಡಲಾಗುತ್ತಿರುವ ಕಮಿಷನ್ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇದಕ್ಕಾಗಿ ನ್ಯಾಯಬೆಲೆ ಅಂಗಡಿ ಮಾಲೀಕರು ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ ನೀಡಿದ್ದು, ಅಷ್ಟರಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳದಿದ್ದರೆ ನ್ಯಾಯಬೆಲೆ ಅಂಗಡಿಗಳಲ್ಲಿ ಸಕ್ಕರೆ, ಗೋಧಿ ಮತ್ತು ಅಕ್ಕಿಯನ್ನು ವಿತರಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ ಟಿ.ಕೃಷ್ಣಪ್ಪ ಅವರು, ಪ್ರಸ್ತುತ ಸರ್ಕಾರ ನೀಡುತ್ತಿರುವ ಕಮಿಷನ್ ಹಣ ತೀರ ಕಡಿಮೆಯಾಗಿದ್ದು, ಕೇರಳ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕ ಸರ್ಕಾರ ಕೂಡ ಕಮಿಷನ್ ಪ್ರಮಾಣವನ್ನು ಹೆಚ್ಚಿಸಬೇಕು. ಇದಕ್ಕಾಗಿ ನಾವು ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಿದ್ದು, ಒಂದು ತಿಂಗಳ ನಂತರ ನ್ಯಾಯಬೆಲೆ ಅಂಗಡಿಗಳಲ್ಲಿ ಈಗ ವಿತರಿಸಲಾಗುತ್ತಿರುವ ಅಕ್ಕಿ, ಗೋಧಿ ಮತ್ತು ಸಕ್ಕರೆ ಪದಾರ್ಥಗಳ ವಿತರಣೆಯನ್ನು ನಿಲ್ಲಿಸಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಆಶ್ವಾಸನೆಯಂತೆ ಬಿಪಿಎಲ್ ಪಡಿತರ ಚೀಟಿದಾರರಿಗೆ 'ಅನ್ನಭಾಗ್ಯ' ಯೋಜನೆಯ ಅಡಿಯಲ್ಲಿ 1ರುಪಾಯಿಗೆ 1ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ನೀಡಲಾಗುತ್ತಿದ್ದ ಕಮಿಷನ್ ಪ್ರಮಾಣ ಇಳಿಕೆಯಾಗಿದ್ದು, ಕಮಿಷನ್ ಹೆಚ್ಚಳ ಮಾಡುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘ ಸರ್ಕಾರವನ್ನು ಒತ್ತಾಯಿಸಿದೆ.