ಸೋಲಾರ್ ಹಗರಣ: ತನಿಖೆಗೆ ಕ್ಯಾಬಿನೆಟ್ ಸಮ್ಮತಿ
ತಿರುವನಂತಪುರ: ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ವಿರುದ್ಧ ಕೇಳಿಬರುತ್ತಿರುವ ಸೋಲಾರ್ ಪ್ಯಾನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಲು ಕೇರಳ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಪ್ರತಿಪಕ್ಷ ಮತ್ತು ಎಡರಂಗದ ಪ್ರತಿಭಟನೆಗೆ ಮಣಿದಿರುವ ಕೇರಳ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು, ತಮ್ಮ ವಿರುದ್ಧ ಕೇಳಿ ಬರುತ್ತಿರುವ ಸೋಲಾರ್ ಪ್ಯಾನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಲು ಮುಂದಾಗಿದ್ದಾರೆ. ಈ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಪುಟ ಸದಸ್ಯರು ಹಗರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಂಪುಟ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಚಾಂಡಿ ಅವರು, ಸೋಲಾರ್ ಪ್ಯಾನ್ ಹಗರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದ್ದು, ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪೀಠವೊಂದನ್ನು ರಚಿಸಲಾಗುತ್ತದೆ. ಆ ಪೀಠದ ಮೂಲಕ ಪ್ರಕರಣದ ವಿಚಾರಣೆ ನಡೆಸಲಾಗುತ್ತದೆ. ಇದಕ್ಕಾಗಿ ಮುಖ್ಯ ನ್ಯಾಯಮೂರ್ತಿಗಳಿಗೊಂದು ಮನವಿ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಅಲ್ಲದೆ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ ಚಾಂಡಿ, ಹಗರಣದ ಕುರಿತು ತನಿಖೆ ನಡೆಸಲು ಸರ್ಕಾರ ಸದಾ ಸಿದ್ದವಿದ್ದು, ಇದಕ್ಕಾಗಿ ಪ್ರತಿಪಕ್ಷಗಳ ಸಲಹೆ ಪಡೆಯಲು ಕೂಡ ನಾವು ಸಿದ್ದರಿದ್ದೇವೆ. ಆದರೆ ಪ್ರತಿಪಕ್ಷಗಳೇ ಈ ಬಗ್ಗೆ ಚರ್ಚಿಸಲು ಸಿದ್ಧರಿಲ್ಲ ಎಂದು ಹೇಳಿದರು.
ಒಟ್ಟಾರೆ ಕೇರಳ ರಾಜ್ಯದ ಮಟ್ಟಿಗೆ ಅತಿ ದೊಡ್ಡ ಭ್ರಷ್ಟಾಚಾರ ಹಗರಣವಾಗಿರುವ ಸೋಲಾರ್ ಪ್ಯಾನ್ ಹಗರಣದಿಂದಾಗಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ ಎನ್ನಲಾಗುತ್ತಿದೆ.