ಮೋದಿ ವಿರುದ್ಧ ಮಾತನಾಡಿದ್ರೆ ಉಚ್ಛಾಟನೆ: ಆರ್‌ಎಸ್‌ಎಸ್ ಎಚ್ಚರಿಕೆ
ಬಹಿರಂಗವಾಗಿಯೇ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಬೆಂಬಲಕ್ಕೆ ನಿಂತಿರುವ..
ಲಖನೌ: ಬಹಿರಂಗವಾಗಿಯೇ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಬೆಂಬಲಕ್ಕೆ ನಿಂತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್), ಮೋದಿ ವಿರುದ್ಧ ಮಾತನಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬಿಜೆಪಿಗೆ ಸೂಚಿಸಿದೆ.
ಮೋದಿ ವಿರುದ್ಧ ಮಾತನಾಡಿದ್ರೆ ಆರು ವರ್ಷ ಪಕ್ಷದಿಂದ ಉಚ್ಛಾಟನೆ ಮಾಡಿ ಎಂದು ಆರ್‌ಎಸ್‌ಎಸ್ ಮುಖಂಡ ಸುರೇಶ್ ಸೋನಿ ಅವರು ಬಿಜೆಪಿಗೆ ಸಲಹೆ ನೀಡಿದ್ದಾರೆ. ಅಲ್ಲದೆ ಮೋದಿ ಪ್ರಧಾನಿಯಾಗಬೇಕು ಎಂದು ದೇಶದ ಜನತೆ ಬಯಸಿದ್ದಾರೆ. ಹೀಗಾಗಿ ಅವರನ್ನು ಬೆಂಬಲಿಸಿ, ಉತ್ತಮ ಸರ್ಕಾರ ರಚನೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಉತ್ತರ ಪ್ರದೇಶ ಬಿಜೆಪಿ ಮುಖಂಡರ ಸಭೆಯಲ್ಲಿ ಮಾತನಾಡಿದ ಸೋನಿ, ದೇಶದಲ್ಲಿ ಈಗ ಕಾಂಗ್ರೆಸ್ ವಿರೋಧಿ ಅಲೆ ಇದೆ. ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡ ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯಬೇಕು ಎಂದಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಲಕ್ಷ್ಮೀಕಾಂತ್ ಬಾಜಪೇಯಿ ಅವರು ಇದ್ದರು.
ಸ್ವಾತಂತ್ರ್ಯೋತ್ಸವ ದಿನದಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಭಾಷಣವನ್ನು ಮೋದಿ ಕಟುವಾಗಿ ಟೀಕಿಸಿದ್ದರು. ಮೋದಿ ಟೀಕೆಗೆ ಪರೋಕ್ಷ ವಿರೋಧ ವ್ಯಕ್ತಪಡಿಸಿದ್ದ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು, ಇದು ಪರಸ್ಪರ ಟೀಕೆ ಮಾಡುವ ಸಮಯವಲ್ಲ ಎಂದಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ವಿರುದ್ಧದ ಪಕ್ಷದೊಳಗಿನ ಟೀಕೆಗಳಿಗೆ ಕಡಿವಾಣ ಹಾಕಲು ಆರ್ಎಸ್ಎಸ್ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.