ನೀತಿ ಸಂಹಿತೆ ಉಲ್ಲಂಘನೆ: ಸಿಎಂ ವಿರುದ್ಧ ಆಯೋಗಕ್ಕೆ ವರದಿ
ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಂಡ್ಯ..
ಮಂಡ್ಯ: ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಈ ಬಗ್ಗೆ ಸೋಮವಾರ ಮಂಡ್ಯದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ ಅವರು, ಸಿಎಂ ನೀತಿ ಸಂಹಿತೆ ಪ್ರಕರಣದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಪ್ರಾಥಮಿಕ ವರದಿ ಕಳುಹಿಸಿರುವುದಾಗಿ ಹೇಳಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ಬಹಿರಂಗ ಸಭೆಯಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದ ಸಿಎಂ ವಿರುದ್ಧ ಆಯೋಗಕ್ಕೆ ವರದಿ ಕಳುಹಿಸಲಾಗಿದ್ದು, ಆಯೋಗದ ಸೂಚನೆ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೃಷ್ಣಯ್ಯ ತಿಳಿಸಿದ್ದಾರೆ.
ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನಿಲ್ಕುಮಾರ್ ಝಾ ಅವರು, ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಇಂದು ಮಂಡ್ಯ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಕೆ.ಆರ್.ಪೇಟೆಯಲ್ಲಿ ಶನಿವಾರ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಸಿಎಂ ಸಿದ್ದರಮಾಯ್ಯ ಅವರು, ತಾಲೂಕಿನ ಹುತಾತ್ಮ ಯೋಧರಿಗೆ ತಲಾ 10 ಲಕ್ಷ ರುಪಾಯಿ ಪರಿಹಾರ ನೀಡುವ ಘೋಷಣೆ ಮಾಡಿದ್ದರು. ತಕ್ಷಣವೇ ಇದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ಕೆಲ ಕಾಲ ಗೊಂದಲಕ್ಕೆ ಒಳಗಾದರು. ಆದರೆ ಅಲ್ಲಿದ್ದವರು ಇದು ಹುತಾತ್ಮ ಯೋಧರಿಗೆ ತೋರಿಸುತ್ತಿರುವ ಗೌರವ. ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದು ಸಮಜಾಯಿಸಿ ನೀಡಿದ್ದರು.