ರಾಜ್ಯಸಭಾ ಸದಸ್ಯರಾಗಿ ಬಿ.ಕೆ.ಹರಿಪ್ರಸಾದ್ ಅವಿರೋಧ ಆಯ್ಕೆ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಅವರು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ..
ಬೆಂಗಳೂರು: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಅವರು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಗಸ್ಟ್ 29ರಂದು ನಡೆಯಬೇಕಿದ್ದ ಚುನಾವಣೆಗೆ ಬಿ.ಕೆ.ಹರಿಪ್ರಸಾದ್ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಹರಿಪ್ರಸಾದ್ ಆಯ್ಕೆಯನ್ನು ಇಂದು ಅಧಿಕೃತವಾಗಿ ಪ್ರಕಟಿಸಿರುವ ಚುನಾವಣಾ ಅಧಿಕಾರಿಗಳು, ಈ ಕುರಿತು ಅವರಿಗೆ ಪ್ರಮಾಣ ಪತ್ರವನ್ನು ನೀಡಿದರು.
ಪ್ರಮಾಣಪತ್ರ ಸ್ವೀಕರಿಸಿದ ಬಳಿಕ ಮಾತನಾಡಿದ ಹರಿಪ್ರಸಾದ್, ರಾಜ್ಯದಲ್ಲಿ ಉತ್ತಮ ಕೆಲಸ ಮಾಡುವತ್ತ ಗಮನಹರಿಸುವುದಾಗಿ ಹೇಳಿದರು.
ಅನಿಲ್ ಲಾಡ್ ಅವರು ಶಾಸಕರಾಗಿ ಆಯ್ಕೆಯಾಗಿ ರಾಜ್ಯಸಭೆ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದರಿಂದ ತೆರವಾದ ಈ ಸ್ಥಾನಕ್ಕೆ ಆಗಸ್ಟ್ 29ರಂದು ಚುನಾವಣೆ ನಿಗದಿಯಾಗಿತ್ತು. ಆದರೆ ರಾಜ್ಯಸಭೆಯ ಈ ಒಂದು ಸ್ಥಾನಕ್ಕಾಗಿ ಕಾಂಗ್ರೆಸ್‌ನಿಂದ ಹರಿಪ್ರಸಾದ್ ಮಾತ್ರ ಉಮೇದುವಾರಿಕೆ ಸಲ್ಲಿಸಿದ್ದರು. ಇತರೆ ರಾಜಕೀಯ ಪಕ್ಷಗಳು ಕಣದಿಂದ ದೂರ ಉಳಿದಿದ್ದವು.