ಅಪಘಾತದಲ್ಲಿ ಮಹಿಳೆ ಸಾವು: 14 ಟ್ರಕ್‌ಗಳಿಗೆ ಬೆಂಕಿ
ಅಪಘಾತದಲ್ಲಿ ಮಹಿಳೆ ಸಾವನ್ನಪ್ಪಿದ ಪರಿಣಾಮ ಉದ್ರಿಕ್ತಗೊಂಡ ಸ್ಥಳೀಯ ಗ್ರಾಮಸ್ಥರು 14 ಟ್ರಕ್‌ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಜಾರ್ಖಂಡ್: ಜಾರ್ಖಂಡ್ ರಾಜ್ಯದ ಹೆದ್ದಾರಿಯಲ್ಲಿ ನಡೆದ ಅಪಘಾತವೊಂದರಲ್ಲಿ ಮಹಿಳೆ ಸಾವನ್ನಪ್ಪಿದ್ದು, ಇದರಿಂದ ಉದ್ರಿಕ್ತಗೊಂಡಿರುವ ಸ್ಥಳೀಯ ಗ್ರಾಮಸ್ಥರು 14 ಟ್ರಕ್‌ಗಳಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಜಾರ್ಖಂಡ್‌ನ ದುಮ್ಕಾ-ರಾಮಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬಳು ಸಾವನ್ನಪ್ಪಿದ್ದಳು. ರಸ್ತೆ ದಾಟುತ್ತಿದ್ದ ಮಹಿಳೆಯ ಮೇಲೆ ವೇಗವಾಗಿ ಬಂದ ಸರಕು ಸಾಗಣೆ ಟ್ರಕ್‌ವೊಂದು ಹರಿದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಳು. ಅಪಘಾತದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಟ್ರಕ್ ಚಾಲಕನ ನಿರ್ಲಕ್ಷ್ಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಆರೋಪಿಸುತ್ತಿರುವ ಗ್ರಾಮಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ನಡುವೆ ಉದ್ರಿಕ್ತ ಗ್ರಾಮಸ್ಥರು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಸುಮಾರು 14 ಸರಕು ಸಾಗಣೆ ಟ್ರಕ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಗ್ರಾಮಸ್ಥರ ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಸಂಚಾರ ಅಸ್ಥವ್ಯಸ್ಥಗೊಂಡಿದೆ. ಘಟನೆಯ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಸಫಲರಾಗಿದ್ದಾರೆ. ಅಲ್ಲದೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.