ಅಸಾರಾಂ ಬಾಪು ಬೆಂಬಲಿಗರಿಂದ ಮಾಧ್ಯಮದವರ ಮೇಲೆ ಹಲ್ಲೆ
16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವ..
ನವದೆಹಲಿ: 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವ ಮಾನವ ಅಸಾರಾಂ ಬಾಪು ಬೆಂಬಲಿಗರು ಶನಿವಾರ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ್ದಾರೆ.
ಇಂದು ಬೆಳಗ್ಗೆ ರಾಜಸ್ಥಾನದ ಜೋಧಪುರದಲ್ಲಿರುವ ಬಾಪು ಆಶ್ರಮಕ್ಕೆ ವರದಿಗಾಗಿ ತೆರಳಿದ್ದ ಪತ್ರಕರ್ತ ಮತ್ತು ಪೋಟೋಗ್ರಾಫರ್ ಮೇಲೆ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾವು ವರದಿಗೆ ತೆರಳಿದ್ದ ವೇಳೆ ಆಶ್ರಮದ ಹೊರಗಡೆ ಭಾರಿ ದೊಡ್ಡ ಸಂಖ್ಯೆಯಲ್ಲಿ ಅವರ ಬೆಂಬಲಿಗರು ಸೇರಿದ್ದರು. ಅವರಲ್ಲಿ ಕೆಲವರು ನಮ್ಮ ಮೇಲೆ ಹಲ್ಲೆ ನಡೆಸಿದರು. ಅಲ್ಲದೆ ನಮ್ಮ ಒಬಿ ವ್ಯಾನ್‌ಗೂ ಹಾನಿ ಮಾಡಿದ್ದಾರೆ ಎಂದು ಗಾಯಗೊಂಡ ವರದಿಗಾರ ತಿಳಿಸಿದ್ದಾರೆ.
ಈ ಮಧ್ಯೆ, ಘಟನೆ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಜೋಧಪುರ ಡಿಸಿಪಿ ಅಜಯ್ ಲಾಂಬಾ ಅವರು ಹೇಳಿದ್ದಾರೆ.
ಇನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಮನಿಷ್ ತಿವಾರಿ ಅವರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.
ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಅಸಾರಾಂ ಬಾಪು ನಿನ್ನೆ ಜೋಧಪುರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಹಾಜರಾಗದೆ ತಲೆಮರೆಸಿಕೊಂಡಿರುವ ಬಾಪುನನ್ನು ಇಂದು ಪೊಲೀಸರು ಬಂಧಿಸುವ ಸಾಧ್ಯತೆ ಇದೆ.