ಬಿಎಸ್‌ವೈ ಬಿಜೆಪಿಗೆ ಬರುವುದು ಬಹುತೇಕ ಖಚಿತ
ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದ್ದು,
ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದ್ದು, ಈ ಕುರಿತು ಇಂದು ಸಂಜೆಯೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
ಈ ಸಂಬಂಧ ದೆಹಲಿಗೆ ತೆರಳಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅವರು ಇಂದು ಬೆಳಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಅಲ್ಲದೆ ಮಧ್ಯಾಹ್ನದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದು, ಯಡಿಯೂರಪ್ಪ ಅವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವುದಕ್ಕೆ ರಾಷ್ಟ್ರೀಯ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ರಾಜನಾಥ್ ಸಿಂಗ್ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಗೌರವಯುತವಾಗಿ ಪಕ್ಷಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.
ಈ ಕುರಿತು ಇಂದು ಸಂಜೆ ಪ್ರಹ್ಲಾದ್ ಜೋಶಿ, ಅನಂತ್ ಕುಮಾರ್ ಹಾಗೂ ಈಶ್ವರಪ್ಪ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದು, ಪತ್ರಿಕಾಗೋಷ್ಠಿಯಲ್ಲಿ ಯಡಿಯೂರಪ್ಪ ಅವರಿಗೆ ಪಕ್ಷಕ್ಕೆ ಬರುವಂತೆ ಅಧಿಕೃತ ಆಹ್ವಾನ ನೀಡಲಿದ್ದಾರೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.