ಬಿಜೆಪಿಗೆ ಬಿಎಸ್ವೈ ವಾಪಸ್: ವರಿಷ್ಠರೊಂದಿಗೆ ಚರ್ಚೆ; ಜೋಶಿ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆ ತರುವ ರಾಜ್ಯ ಬಿಜೆಪಿ ನಾಯಕರ ಪ್ರಯತ್ನ..
ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆ ತರುವ ರಾಜ್ಯ ಬಿಜೆಪಿ ನಾಯಕರ ಪ್ರಯತ್ನ ಗುರುವಾರ ಮತ್ತಷ್ಟು ಚುರುಕುಗೊಂಡಿದ್ದು, ಈ ಕುರಿತು ವರಿಷ್ಠರೊಂದಿಗೆ ಚರ್ಚಿಸುವುದಕ್ಕಾಗಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.
ಈ ಸಂಬಂಧ ದೆಹಲಿಗೆ ತೆರಳಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ, ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಅರವಿಂದ್ ಲಿಂಬಾವಳಿ ಇಂದು ಬೆಳಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಅನಂತ್ ಕುಮಾರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ಯಡಿಯೂರಪ್ಪ ಅವರನ್ನು ವಾಪಸ್ ಬಿಜೆಪಿ ಕರೆತರುವ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲಾಗುತ್ತಿದ್ದು, ಚರ್ಚೆಯ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ತುಘಲಕ್ ರಸ್ತೆಯಲ್ಲಿರುವ ಅನಂತ್ ಕುಮಾರ್ ನಿವಾಸದಲ್ಲಿ ಸರಣಿ ಸಭೆ ನಡೆಸಿರುವ ನಾಯಕರು, ಮಧ್ಯಾಹ್ನದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ.