ಜನಾರ್ದನ್ ರೆಡ್ಡಿಗಿಲ್ಲ ಜಾಮೀನು
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ...
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಪ್ರಕರಣ ಸಂಬಂಧ ತಮಗೆ ಜಾಮೀನು ನೀಡುವಂತೆ ಕೋರಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಅಕ್ರಮ ಗಣಿಗಾರಿಕೆ ಮತ್ತು ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಗಳಲ್ಲಿ ವಿಚಾರಣೆ ಇನ್ನು ಬಾಕಿ ಇರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಜಾಮೀನು ನಿರಾಕರಿಸಿದೆ. ಇದೇ ವೇಳೆ, ಇನ್ನು ಆರು ತಿಂಗಳೊಳಗಾಗಿ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸಿಬಿಐಗೆ ತಾಕೀತು ಮಾಡಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪದಡಿ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿರುವ ಜನಾರ್ದನ್ ರೆಡ್ಡಿಗೆ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡದ ಹಿನ್ನೆಲೆಯಲ್ಲಿ ರೆಡ್ಡಿ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಅರ್ಜಿಯ ವಿಚಾರಣೆ ವೇಳೆ, ಪ್ರಕರಣಗಳ ವಿಚಾರಣೆ ಇನ್ನು ಬಾಕಿ ಇರುವುದರಿಂದ ಜಾಮೀನು ನೀಡದಂತೆ ಸಿಬಿಐ ಅಧಿಕಾರಿಗಳು ಕೋರ್ಟ್ಗೆ ಮನವಿ ಮಾಡಿದ್ದರು. ಅಧಿಕಾರಿಗಳ ಮನವಿಯನ್ನು ಪುರಸ್ಕರಿಸಿರುವ ಕೋರ್ಟ್ ರೆಡ್ಡಿಗೆ ಜಾಮೀನು ನಿರಾಕಿರಿಸಿದೆ.