ಬಿಎಸ್ವೈ ಬಿಜೆಪಿಗೆ ಅನಿವಾರ್ಯ: ಆನಂತ್ ಕುಮಾರ್
ಮಾಜಿ ಮುಖ್ಯಮಂತ್ರಿ, ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಗೆ ಮರಳುವುದಕ್ಕೆ ಪಕ್ಷದ ಹೈಕಮಾಂಡ್ ಹಸಿರು..
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿಗೆ ಮರಳುವುದಕ್ಕೆ ಪಕ್ಷದ ಹೈಕಮಾಂಡ್ ಹಸಿರು ನಿಶಾನೆ ತೊರಿದ ಬೆನ್ನಲ್ಲೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರು ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಕರೆ ತರುವುದು ಅನಿವಾರ್ಯ ಎಂದು ಹೇಳುವ ಮೂಲಕ ಬಿಎಸ್ವೈಗೆ ಪರೋಕ್ಷ ಆಹ್ವಾನ ನೀಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆನಂತ್ ಕುಮಾರ್, ಭ್ರಷ್ಟ ಕಾಂಗ್ರೆಸ್ ತೊಲಗಿಸಲು ಎಲ್ಲರೂ ಒಂದಾಗಿ ಹೋಗುವ ಅನಿವಾರ್ಯತೆ ಇದೆ ಎಂದು ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಸಾಗುವ ಅಗತ್ಯವಿದೆ. ಹೀಗಾಗಿ ಯಡಿಯೂರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಅನಿವಾರ್ಯತೆ ಬಗ್ಗೆ ಹೈಕಮಾಂಡ್ ತಿಳಿಸಲಾಗಿದೆ. ಸದ್ಯದಲ್ಲೇ ವರಿಷ್ಠರು ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಹೇಳಿದರು.
ಈ ಮಧ್ಯೆ ಕೆಜೆಪಿಯ ಮೂವರು ಶಾಸಕರು ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಜೆಪಿ ವಿಧಾನಸಭೆಯಲ್ಲಿ ಆರು ಶಾಸಕರನ್ನು ಹೊಂದಿದ್ದು, ಆ ಪೈಕಿ ಬಿ.ಆರ್.ಪಾಟೀಲ್, ಗುರು ಪಾಟೀಲ್ ಮತ್ತು ಗುರುಪಾದಪ್ಪ ನಾಗಮಾರಪಳ್ಳಿ ಬಿಜೆಪಿ ಸೇರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಬಿಎಸ್ವೈ ಬೆಂಬಲಿಗರ ಕುರಿತು ಇನ್ನೂ ನಿರ್ಧಾರವಿಲ್ಲ:
ಯಡಿಯೂರಪ್ಪ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಉತ್ಸಾಹ ತೋರಿಸುತ್ತಿರುವ ಪಕ್ಷದ ರಾಜ್ಯ ನಾಯಕರು ಅವರ ಬೆಂಬಲಿಗರ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಯಡಿಯೂರಪ್ಪ ಪಕ್ಷಕ್ಕೆ ಬೇಕೇ ಬೇಕು ಎನ್ನುತ್ತಿರುವ ಬಿಜೆಪಿ ನಾಯಕರು ಅವರ ಬೆಂಬಲಿಗರ ಬಗ್ಗೆ ಮುತುವರ್ಜಿ ವಹಿಸಿಲ್ಲ. ಯಡಿಯೂರಪ್ಪ ಅವರೇ ಈ ಕುರಿತು ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ತೀರ್ಮಾನಿಸಲಿ ಎಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪಕ್ಷ ಸೇರ್ಪಡೆ ಕುರಿತು ಚರ್ಚಿಸಲು ಯಡಿಯೂರಪ್ಪ ಅವರು ದೆಹಲಿಗೆ ಹೋಗುವಾಗ ತಮ್ಮ ಬೆಂಬಲಿಗರ ಕುರಿತು ರಾಷ್ಟ್ರೀಯ ನಾಯಕರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಿದ್ದಾರೆ ಎನ್ನಲಾಗಿದೆ.