ಮತ್ತೆ ಚೌಹ್ವಾಣ್ ಮೋಡಿ: ಸಿಎಂಗೆ ಮೋದಿ ಅಭಿನಂದನೆ
ಮಧ್ಯ ಪ್ರದೇಶದಲ್ಲಿ ಮತ್ತೆ ಚೌಹ್ವಾಣ್ ಮೋಡಿ ಮಾಡಿದ್ದು, ಪ್ರಸಕ್ತ ಚುನಾವಣೆಯಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ ದಾಪುಗಾಲಿರಿಸಿದೆ.
ಭೋಪಾಲ್: ಮಧ್ಯ ಪ್ರದೇಶದಲ್ಲಿ ಮತ್ತೆ ಶಿವರಾಜ್ ಸಿಂಗ್ ಚೌಹ್ವಾಣ್ ಮೋಡಿ ಮಾಡಿದ್ದು, ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ ದಾಪುಗಾಲಿರಿಸಿದೆ.
ಒಟ್ಟು 230 ಸ್ಥಾನಗಳನ್ನು ಹೊಂದಿರುವ ಮಧ್ಯ ಪ್ರದೇಶ ವಿಧಾನಸಭೆಯ ಆಡಳಿತ ಚುಕ್ಕಾಣಿ ಹಿಡಿಯಲು 115 ಸ್ಥಾನಗಳ ಅಗತ್ಯವಿದೆ. ಆದರೆ ಆಢಳಿತಾ ರೂಢ ಬಿಜೆಪಿ ಪಕ್ಷ ಈಗಾಗಲೇ 113ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಮತ್ತೆ ಸತತ ಮೂರನೇ ಬಾರಿಗೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ವಾಣ್ ಅವರು ಆಡಳಿತ ಚುಕ್ಕಾಣಿ ಹಿಡಿದಿದ್ದಾರೆ.
ರಾಜ್ಯದಲ್ಲಿ ರಾಹುಲ್ ಗಾಂಧಿ ಮೋಡಿ ನಡೆಯಲಿದೆ ಭಾವಿಸಿದ್ದ ಕಾಂಗ್ರೆಸ್ ಕೇವಲ 71 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದ್ದು, ಮತ್ತೆ ಪ್ರತಿಪಕ್ಷ ಸ್ಥಾನದಲ್ಲಿ ಕೂರಲು ಕಾಂಗ್ರೆಸ್ ಸಜ್ಜಾಗಿದೆ. ಕಳೆದ ಬಾರಿ 70 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದ್ದ ಕಾಂಗ್ರೆಸ್ ಈ ಬಾರಿ ಹೆಚ್ಚುವರಿಯಾಗಿ ಒಂದು ಸ್ಥಾನವನ್ನು ಮಾತ್ರ ಪಡೆದುಕೊಳ್ಳುವಲ್ಲಿ ಯಶಕಂಡಿದೆ.
ಸತತ ಮೂರನೇ ಬಾರಿ ಆಡಳಿತ ಚುಕ್ಕಾಣಿ ಹಿಡಿಯುತ್ತಿರುವ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ವಾಣ್ ಅವರ ಬಿಜೆಪಿಗೆ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ಇಂದು ಬೆಳಗ್ಗೆಯೇ ಟ್ವಿಟರ್‌ನಲ್ಲಿ ತಮ್ಮ ಶುಭಾಶಯವನ್ನು ಟ್ವೀಟ್ ಮಾಡಿರುವ ಮೋದಿ, ಶಿವರಾಜ್ ಸಿಂಗ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.