ಸರ್ಕಾರ ರಚನೆ ಬಿಜೆಪಿ ಜವಾಬ್ದಾರಿ: ಎಎಪಿ
ತಾನು ಸರ್ಕಾರ ರಚನೆಗೆ ಮುಂದಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಆಮ್ ಆದ್ಮಿ ಪಕ್ಷ(ಎಎಪಿ),..
ನವದೆಹಲಿ: ತಾನು ಸರ್ಕಾರ ರಚನೆಗೆ ಮುಂದಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಆಮ್ ಆದ್ಮಿ ಪಕ್ಷ(ಎಎಪಿ), ಸರ್ಕಾರ ರಚನೆ ಮಾಡುವುದು ಬಿಜೆಪಿಯ ಜವಾಬ್ದಾರಿ ಎಂದು ಸೋಮವಾರ ಹೇಳಿದೆ.
ದೆಹಲಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಎಎಪಿ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಎಎಪಿ ನಾಯಕ, ಯೋಗೇಂದ್ರ ಯಾದವ್ ಅವರು, ಬಿಜೆಪಿ ಈ ಚುನಾವಣೆಯಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹೀಗಾಗಿ ಸರ್ಕಾರ ರಚನೆ ಮಾಡುವುದು ಅವರ ಜಬಾವ್ದಾರಿ ಎಂದಿದ್ದಾರೆ. ಅಲ್ಲದೆ ಒಂದು ವೇಳೆ ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನ ನೀಡಿದರು, ತಾವು ಸರ್ಕಾರ ರಚನೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾವು ಯಾವುದೇ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಪ್ರತಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಲು ಎಎಪಿ ಸಿದ್ಧವಾಗಿದೆ ಎಂದು ಎಎಪಿಯ ಮತ್ತೊರ್ವ ನಾಯಕ ಮನೀಶ್ ಸಿಸೋಡಿಯಾ ಅವರು ಹೇಳಿದ್ದಾರೆ.
ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಸೋಡಿಯಾ, ಯಾವುದೇ ಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಸಮರ್ಥ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸಲು ನಿರ್ಧರಿಸಲಾಗಿದ್ದು, ಮರು ಚುನಾವಣೆ ಎದುರಿಸಲೂ ಆಮ್ ಆದ್ಮಿ ಸಿದ್ಧವಿದೆ ಎಂದು ಹೇಳಿದ್ದಾರೆ.
ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಕಾಂಗ್ರೆಸ್ ಅರವಿಂದ್ ಕೇಜ್ರಿವಾಲ್ ಅವರಿಗೆ ಬೆಂಬಲ ನೀಡುವ ಬಗ್ಗೆ ಚಿಂತನೆ ನಡೆಸಿತ್ತು. ಆದರೆ ನಾವು ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಎಎಪಿ ಹೇಳಿರುವುದರಿಂದ ಸದ್ಯ ದೆಹಲಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ ನಂತರ ಮರು ಚುನಾವಣೆ ನಡೆಯುವ ಸಾಧ್ಯತೆ ಇದೆ.
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಬೇಕಾದ್ರೆ ಕನಿಷ್ಠ ನಾಲ್ಕು ಶಾಸಕರ ಬೆಂಬಲ ಬೇಕು. ಆದರೆ ಪಕ್ಷೇತರರಿಬ್ಬರ ಬೆಂಬಲ ಸಿಕ್ಕರೂ ಬಿಜೆಪಿ ಬಲ 34ಕ್ಕೆ ನಿಂತು ಅತಂತ್ರವಾಗಲಿದೆ. ಹೀಗಾಗಿ ರಾಷ್ಟ್ರಪತಿ ಆಡಳಿತ ಮತ್ತು ಮರು ಚುನಾವಣೆ ಅನಿವಾರ್ಯವಾಗುವ ಸಾಧ್ಯತೆ ಇದೆ.