ರಾಜಸ್ಥಾನ ಸಿಎಂ ಆಗಿ ವಸುಂಧರಾ ರಾಜೇ ಪ್ರಮಾಣ
ರಾಜಸ್ಥಾನ ವಿಧಾಸಭೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿಯ ವಸುಂಧರಾ..
ಜೈಪುರ: ರಾಜಸ್ಥಾನ ವಿಧಾಸಭೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿಯ ವಸುಂಧರಾ ರಾಜೇ ಅವರು ಶುಕ್ರವಾರ ಮತ್ತೆ ರಾಜಸ್ಥಾನದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಇಂದು ಬೆಳಗ್ಗೆ ಜೈಪುರ ವಿಧಾನಸೌಧದ ಸಭಾಂಗಣದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲೇ ಮಾರ್ಗರೇಟ್ ಆಳ್ವಾ ಅವರು ಗ್ವಾಲಿಯರ್ ರಾಜವಂಶಕ್ಕೆ ಸೇರಿದ 60 ವರ್ಷದ ವಸುಂಧರಾ ರಾಜೇ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಮುಂಚೆ ವಸುಂಧರಾ ರಾಜೇ ಅವರು 2003ರಲ್ಲಿ ರಾಜಸ್ಥಾನದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದೀಗ ಇತಿಹಾಸ ಮರುಕಳಿಸಿದ್ದು, ಮತದಾರ ವಸುಂಧರಾ ರಾಜೇ ನೇತೃತ್ವದ ಬಿಜೆಪಿಯನ್ನು ಮತ್ತೆ ಅಧಿಕಾರದ ಗದ್ದುಗೆಯಲ್ಲಿ ಕೂರಿಸಿದ್ದಾನೆ.
ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿಯ ಪ್ರಮುಖ ನಾಯಕರ ದಂಡೇ ಹರಿದುಬಂದಿತ್ತು. ಬಿಜೆಪಿ ಪ್ರಧಾನಿ ಅಭ್ಯರ್ಥಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಹಾಗೂ ಛತ್ತೀಸ್ಗಡ ಮುಖ್ಯಮಂತ್ರಿ ರಮಣ್ ಸಿಂಗ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು.