ಗಂಗೂಲಿಗೆ ಬಿಜೆಪಿ ಟಿಕೆಟ್, ಇನ್ನು ನಿರ್ಧಾರ ಪ್ರಟಿಸದ ದಾದಾ
ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ..
ಕೋಲ್ಕತಾ: ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರಿಗೆ ಬಿಜೆಪಿ ಆಹ್ವಾನ ನೀಡಿದೆ. ಆದರೆ ಬಿಜೆಪಿಯ ಈ ಆಹ್ವಾನವನ್ನು ಒಪ್ಪಿಕೊಳ್ಳುವ ಬಗ್ಗೆ ದಾದಾ ಇನ್ನು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಬಂಗಾಳಿ ದಿನಪತ್ರಿಕೆಯೊಂದು ವರದಿ ಮಾಡಿದೆ.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಂದಲೇ ಈ ಆಹ್ವಾನಿ ಬಂದಿದ್ದು, ಕೇಂದ್ರದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ತಮ್ಮನ್ನು ಕ್ರೀಡಾ ಸಚಿವರನ್ನಾಗಿ ಮಾಡಲಾಗುವುದು ಎಂಬ ಭರವಸೆಯನ್ನು ಸಹ ದಾದಾಗೆ ನೀಡಲಾಗಿದೆ ಎಂದು ವರದಿ ಮಾಡಲಾಗಿದೆ.
'ಹೌದು ನನಗೆ ಆಹ್ವಾನ ಬಂದಿದೆ. ಆದರೆ ಆ ಬಗ್ಗೆ ನಾನು ಇನ್ನು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಕೆಲವು ದಿನಗಳಿಂದ ನಾನು ಬ್ಯುಸಿಯಾಗಿದ್ದೇನೆ. ಶೀಘ್ರದಲ್ಲೇ ಆ ಕುರಿತು ನಿರ್ಧಾರ ಪ್ರಕಟಿಸುತ್ತೇನೆ' ಎಂದು ಗಂಗೂಲಿ ಹೇಳಿರುವುದಾಗಿ ಪತ್ರಿಕೆ ವರದಿ ಮಾಡಿದೆ.
ಕಳೆದ ನವೆಂಬರ್ನಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಪಶ್ಚಿಮ ಬಂಗಾಳದ ಬಿಜೆಪಿ ಉಸ್ತುವಾರಿಯೂ ಆಗಿರುವ ಸಂಸದ ವರುಣ್ ಗಾಂಧಿ ಅವರನ್ನು ಗಂಗೂಲಿ ಭೇಟಿ ಮಾಡಿದ್ದರು. ಇದಾದ ಬಳಿಕ ದಾದಾ ಬಿಜೆಪಿ ಸೇರುತ್ತಾರೆ ಎಂಬ ಸುದ್ದಿ ಇತ್ತು.