ಸಲಿಂಗಾಪರಾಧ ವಿರುದ್ಧ ಸುಗ್ರೀವಾಜ್ಞೆ ಸದ್ಯಕ್ಕಿಲ್ಲ: ಶಿಂಧೆ
ಸಲಿಂಗಾಪರಾಧ ಎಂದು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ಸದ್ಯಕ್ಕೆ...
ನವದೆಹಲಿ: ಸಲಿಂಗಾಪರಾಧ ಎಂದು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ಸದ್ಯಕ್ಕೆ ಚಿಂತನೆ ನಡೆಸಿಲ್ಲ ಎಂದು ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಶನಿವಾರ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸಲಿಂಗಾಪರಾಧ ತೀರ್ಪಿನ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ ಹೊರತು, ಸದ್ಯಕ್ಕೆ ಸುಗ್ರೀವಾಜ್ಞೆ ಹೊರಡಿಸುವ ಚಿಂತನೆ ನಡೆಸಿಲ್ಲ ಎಂದು ಶಿಂಧೆ ಸ್ಪಷ್ಟಪಡಿಸಿದ್ದಾರೆ.
ವಯಸ್ಕ ಸಲಿಂಗಿಗಳ ನಡುವಿನ ಸಮ್ಮತಿಯ ಲೈಂಗಿಕ ಸಂಬಂಧವನ್ನು ಕಾನೂನುಬದ್ಧಗೊಳಿಸಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಚಿಂತನೆ ನಡೆಸುತ್ತಿದೆ ಎಂದು ಹೇಳಲಾಗಿತ್ತು.
ಇದಕ್ಕೆ ಪ್ರತಿಕ್ರಯಿಸಿರುವ ಶಿಂಧೆ ಸಲಿಂಗಾಪರಾಧ ವಿರುದ್ಧ ಸುಗ್ರೀವಾಜ್ಞೆ ಬಗ್ಗೆ ಸದ್ಯಕ್ಕೆ ಯೋಜನೆ ರೂಪಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಲಿಂಗಕಾಮವನ್ನು ಅಪರಾಧ ಎಂದು ಘೋಷಿಸಿ ಸುಪ್ರೀಂಕೋರ್ಟ್ ಗುರುವಾರ ಐತಿಹಾಸಿಕ ತೀರ್ಪು ನೀಡಿತ್ತು. ಇದಕ್ಕೆ ದೇಶ- ವಿದೇಶಗಳಲ್ಲಿ ವಿರೋಧ ವ್ಯಕ್ತವಾಗಿತ್ತು. ಇದಲ್ಲದೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಲಿದೆ ಎಂಬ ಮಾತು ಕೇಳಿಬಂದಿತ್ತು.