ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಡಿ.26ಕ್ಕೆ ದೆಹಲಿ ಮುಖ್ಯಮಂತ್ರಿಯಾಗಿ ಕೇಜ್ರಿವಾಲ್ ಪ್ರಮಾಣ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಆಮ್ ಆದ್ಮಿ ಪಕ್ಷ(ಎಎಪಿ) ನಿರ್ಧರಿಸಿದ್ದು,

Lingaraj Badiger
Updated On : 23 Dec 2013, 2:18 am

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಆಮ್ ಆದ್ಮಿ ಪಕ್ಷ(ಎಎಪಿ) ನಿರ್ಧರಿಸಿದ್ದು, ಡಿಸೆಂಬರ್ 26ಕ್ಕೆ ದೆಹಲಿ ನೂತನ ಮುಖ್ಯಮಂತ್ರಿಯಾಗಿ ಅರವಿಂದ್ ಕೇಜ್ರಿವಾಲ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಂದು ದೆಹಲಿಯ ಗಾಜಿಯಾಬಾದ್‌ನಲ್ಲಿ ನಡೆದ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಜ್ರಿವಾಲ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ಸಭೆಯ ಬಳಿಕ ಸುದ್ದಿಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚಿಸಲು ಜನರು ಒಲವು ತೋರಿಸಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚಿಸಲು ನಿರ್ಧರಿಸಿದೆ ಎಂದು ತಿಳಿಸಿದರು.

ಸರ್ಕಾರ ರಚನೆ ಬಗ್ಗೆ ಜನಾಭಿಪ್ರಾಯ ಕೇಳಲು ಎಎಪಿ ಒಂದು ವಾರ ಕಾಲ 128 ಕಡೆ ರ್ಯಾಲಿಗಳನ್ನು ನಡೆಸಿದೆ. ಬಹಳಷ್ಟು ಕಡೆ ಬೆಂಬಲ ವ್ಯಕ್ತವಾಗಿದೆ ಎಂದಿದ್ದಾರೆ.

ಇಂದು ಮಧ್ಯಾಹ್ನ 12.30ಕ್ಕೆ ಉಪ ರಾಜ್ಯಪಾಲರನ್ನು ಭೇಟಿ ಮಾಡಿ, ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಇನ್ನು ಎಎಪಿ ಕಾಂಗ್ರೆಸ್ ಬೆಂಬಲದೊಂದಿಗೆ ಸರ್ಕಾರ ರಚಿಸುವ ನಿರ್ಧಾರ ಪ್ರಕಟಿಸುತ್ತಿದ್ದಂತೆ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದಿಕ್ಷಿತ್ ಅವರು ಅರವಿಂದ್ ಕೇಜ್ರಿವಾಲ್ ಅವರಿಗೆ ಶುಭಾಶಯ ಕೋರಿದ್ದಾರೆ. ಅಲ್ಲದೆ ಆಮ್ ಆದ್ಮಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲೇಬೇಕು. ಇಲ್ಲದಿದ್ದರೆ ಬೆಂಬಲ ವಾಪಸ್ ಪಡೆಯುವುದಾಗಿ ಮೊದಲ ದಿನವೇ ಎಚ್ಚರಿಕೆ ನೀಡಿದ್ದಾರೆ.

26ಕ್ಕೆ ಪ್ರಮಾಣವಚನ
ಇದೇ 26ರಂದು ದೆಹಲಿಯಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಹಾಗೂ ಅವರ ಸಂಪುಟ ಸದಸ್ಯರಾಗಿ ಆಪ್‌ನ ಮೂವರು ನಾಯಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭವು ಜಂತರ್‌ಮಂತರ್ ನಲ್ಲಿ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement