ಆದರ್ಶ ಹಗರಣದ ವರದಿ ತಿರಸ್ಕರಿಸುವ 'ಮಹಾ' ನಿರ್ಧಾರ ಒಪ್ಪಿಕೊಳ್ಳಲ್ಲ: ರಾಹುಲ್
ಆದರ್ಶ ಹಗರಣದ ತನಿಖಾ ವರದಿಯನ್ನು ತಿರಸ್ಕರಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ತಾವು ಒಪ್ಪಿಕೊಳ್ಳುವುದಿಲ್ಲ..
ನವದೆಹಲಿ: ಆದರ್ಶ ಹಗರಣದ ತನಿಖಾ ವರದಿಯನ್ನು ತಿರಸ್ಕರಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ತಾವು ಒಪ್ಪಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ನಾನು ಒಪ್ಪಿಕೊಳ್ಳುವುದಿಲ್ಲ. ವರದಿಯನ್ನು ಪುನರ್ ಪರಿಗಣಿಸಬೇಕು ಎಂದು ಸೂಚಿಸಿದ್ದಾರೆ.
ಹಗರಣದಲ್ಲಿ ಕಾಂಗ್ರೆಸ್‌ನ ಕೆಲವು ಹಿರಿಯ ನಾಯಕರು ಭಾಗಿಯಾಗಿದ್ದು, ಅವರನ್ನು ರಕ್ಷಿಸಲಾಗುತ್ತಿದೆ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಇಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು.
ಎಲ್ಲ ರಾಜಕೀಯ ಪಕ್ಷಗಳು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿವೆ. ಆದರೆ ಯಾರೂ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಬರೀ ಮಾತನಾಡುತ್ತಾರೆ. ಕೆಲಸ ಮಾಡಲ್ಲ ಎಂದರು.
ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ಅಜಯ್ ಮಾಕೇನ್ ಅವರು, ಕಾಂಗ್ರೆಸ್ ಆಡಳಿತವಿರುವ ಎಲ್ಲ ರಾಜ್ಯಗಳು ಮುಂದಿನ ವರ್ಷ ಫೆಬ್ರುವರಿ 28ರೊಳಗೆ ಹೊಸ ಲೋಕಾಯುಕ್ತ ಕಾಯ್ದೆಯನ್ನು ಜಾರಿಗೊಳಿಸಬೇಕು. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಕೇನ್ ತಿಳಿಸಿದರು.