ಬಿಎಸ್‌ವೈ ಬಿಜೆಪಿಗೆ ಬರುವುದು ಖಚಿತ: ರಾಜನಾಥ್ ಸಿಂಗ್
ಕೆಜೆಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮರಳಿ ಬಿಜೆಪಿಗೆ ಬರುವುದು ಖಚಿತ ಎಂದು ಬಿಜೆಪಿ..
ಬೆಂಗಳೂರು: ಕೆಜೆಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮರಳಿ ಬಿಜೆಪಿಗೆ ಬರುವುದು ಖಚಿತ ಎಂದು ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.
ರಾಜನಾಥ್ ಸಿಂಗ್ ಅವರು ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲು ಇಂದು ನಗರಕ್ಕೆ ಆಗಮಿಸಿದ್ದು, ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಪಕ್ಷಕ್ಕೆ ಮರಳುವುದು ಖಚಿತವಾಗಿದ್ದು, ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ದಿನಾಂಕದ ಬಗ್ಗೆ ರಾಜ್ಯ ಘಟಕ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಯಡಿಯೂರಪ್ಪ ಅವರನ್ನು ಮರಳಿ ಪಕ್ಷಕ್ಕೆ ಕರೆತರುವ ಬಗ್ಗೆ ರಾಜ್ಯ ಬಿಜೆಪಿ ಘಟಕ ನಮ್ಮೊಂದಿಗೆ ಚರ್ಚಿಸಿದೆ. ನಾವು ಸಹ ಅದಕ್ಕೆ ಒಪ್ಪಿಗೆ ಸೂಚಿಸಿದ್ದೇವೆ ಎಂದು ರಾಜನಾಥ್ ಸಿಂಗ್ ಹೇಳಿದರು.
ಲೋಕಸಭೆ ಚುನಾವಣೆಗೆ ಸಿದ್ಧತೆ, ಯಡಿಯೂರಪ್ಪ ಪಕ್ಷ ಸೇರ್ಪಡೆ ಸೇರಿದಂತೆ ಹಲವು ವಿಚಾರಗಳ ಕುರಿತು ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು ಎನ್ನಲಾಗಿದೆ.