ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಬೇಕು: ಚಿದು
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಕೇಂದ್ರ ವಿತ್ತ ಸಚಿವ ..
ನವದೆಹಲಿ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಕೇಂದ್ರ ವಿತ್ತ ಸಚಿವ ಪಿ.ಚಿದಂಬರಂ ಅವರು ಸೋಮವಾರ ಹೇಳಿದ್ದಾರೆ.
ಒಂದುವೇಳೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಗೆದ್ದು ಅಧಿಕಾರಕ್ಕೆ ಬಂದಿದ್ದೆಯಾದರೆ, ಯಾರೂ ಪ್ರಧಾನಿಯಾಗುತ್ತಾರೆ ಎಂಬುದನ್ನು ಚುನಾವಣೆಗೂ ಮುನ್ನ ಪ್ರಕಟಿಸಿದರೆ ಒಳ್ಳೆಯದು. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಪಕ್ಷ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚಿದು ತಿಳಿಸಿದ್ದಾರೆ.
ಈಗ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ನಾಯಕ ಯಾರು ಎಂದು ಮತದಾರರು ಪ್ರಶ್ನಿಸುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಚಿದಂಬರಂ ಹೇಳಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ತನ್ನ ಪ್ರಧಾನಿ ಅಭ್ಯರ್ಥಿ ಎಂದು ಬಿಜೆಪಿ ಘೋಷಿಸಿದ್ದನ್ನು ಕಾಂಗ್ರೆಸ್ ತೀವ್ರವಾಗಿ ಟೀಕಿಸಿತ್ತು. ಆದರೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್ ತನ್ನ ವರಸೆಯನ್ನು ಬದಲಿಸಿತು. ಸ್ವತಹ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ, ಸೂಕ್ತ ಸಂದರ್ಭದಲ್ಲಿ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವುದಾಗಿ ತಿಳಿಸಿದರು.
ಜನವರಿ 17ಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯಲಿದ್ದು, ಈ ವೇಳೆ ಕಾಂಗ್ರೆಸ್ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆ ಇದೆ.