ಟಂಟಂ-ಲಾರಿ ಅಪಘಾತ: ಮೃತರ ಕುಟುಂಬಕ್ಕೆ 1 ಲಕ್ಷ ಪರಿಹಾರ
ನಿನ್ನೆ ಬಿಜಾಪುರ ಜಿಲ್ಲೆ ದೇವರಹಿಪ್ಪರಗಿ ಬಳಿ ಟಂಟಂ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ..
ಬೆಂಗಳೂರು: ನಿನ್ನೆ ಬಿಜಾಪುರ ಜಿಲ್ಲೆ ದೇವರಹಿಪ್ಪರಗಿ ಬಳಿ ಟಂಟಂ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ ಒಂದು ಲಕ್ಷ ರುಪಾಯಿ ಪರಿಹಾರ ಘೋಷಿಸಿದ್ದಾರೆ.
ಭಾನುವಾರ ಬೆಳಗ್ಗೆ ಬಿಜಾಪುರ ಜಿಲ್ಲೆ ಸಿಂದಗಿ ತಾಲೂಕಿನ ದೇವರಹಿಪ್ಪರಗಿ ಸಮೀಪ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಟಂಟಂಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಪೊಲೀಸ್ ಪೇದೆ ಹಾಗೂ ಒಂದೇ ಕುಟುಂಬದ ಮೂವರು ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು.
ಬಿಜಾಪುರದಿಂದ ಸಿಂದಗಿ ಕಡೆಗೆ ಹೊರಟಿದ್ದ ಸಿಮೆಂಟ್ ತುಂಬಿದ ಲಾರಿ ಟಂಟಂ ಅನ್ನು ಹಿಂದಿಕ್ಕುವ ಭರದಲ್ಲಿ ದೇವರಹಿಪ್ಪರಗಿಯಿಂದ ಸಿಂದಗಿಗೆ ಹೊರಟಿದ್ದ ಪ್ರಯಾಣಿಕರು ತುಂಬಿದ್ದ ಮತ್ತೊಂದು ಟಂಟಂ ವಾಹನಕ್ಕೆ ಡಿಕ್ಕಿ ಹೊಡೆದಿದೆ.