ಪ್ರಧಾನಿ ರಾಜಿನಾಮೆ ವಿಚಾರ ತಳ್ಳಿ ಹಾಕಿದ ಮನೀಶ್ ತಿವಾರಿ
ಪ್ರಧಾನಮಂತ್ರಿ ಮನಮೋಹನ್ ಸಿಂಗ್ ರಾಜಿನಾಮೆ ನೀಡುವ ಕುರಿತು ಎದ್ದಿರುವ ಊಹಾಪೋಹವನ್ನು ತಳ್ಳಿಹಾಕಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ...
ನವದೆಹಲಿ: ಪ್ರಧಾನಮಂತ್ರಿ ಮನಮೋಹನ್ ಸಿಂಗ್ ರಾಜಿನಾಮೆ ನೀಡುವ ಕುರಿತು ಎದ್ದಿರುವ ಊಹಾಪೋಹವನ್ನು ತಳ್ಳಿಹಾಕಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಮನೀಶ್ ತಿವಾರಿ ಅವರು, ಇದೊಂದು ನಿರಾಧಾರ ವರದಿ ಎಂದಿದ್ದಾರೆ.
ಪ್ರಧಾನಿ ರಾಜಿನಾಮೆ ಕುರಿತಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದೊಂದು ಊಹಾಪೋಹ ಸುದ್ದಿ. ಇದರಲ್ಲಿ ಯಾವುದೇ ತಿರುಳಿಲ್ಲ ಎಂದಿದ್ದಾರೆ. ಈ ಹೇಳಿಕೆ ಕೇವಲ ಅಭಿಪ್ರಾಯ ಮತ್ತು ಪ್ರಚೋದಿತ ಆರೋಪಣೆಯನ್ನು ಆಧರಿಸಿದೆ. ಇಂತಹ ಹೇಳಿಕೆಯನ್ನು ನಾನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಮನೀಶ್ ತಿವಾರಿ ಹೇಳಿದ್ದಾರೆ.
2014ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ, ಯುಪಿಎ ಸರ್ಕಾರದ ಸಾಧನೆಗಳನ್ನು ವಿವರಿಸಲು ಪ್ರಧಾನಿ ಅವರು ಶುಕ್ರವಾರ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ಮನೀಶ್ ತಿಳಿಸಿದ್ದಾರೆ.
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯನ್ನಾಗಿ ಪಕ್ಷ ಯಾವಾಗ ಘೋಷಿಸಲಿದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸೂಕ್ತ ಸಮಯದಲ್ಲಿ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ಈ ಹಿಂದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹೇಳಿದ್ದು, ಅದರಂತೆ ಪಕ್ಷ ನಡೆದುಕೊಳ್ಳಲಿದೆ ಎಂದರು.