ರಾಹುಲ್ ಪ್ರಧಾನಿ ಅಭ್ಯರ್ಥಿಯಾದರೆ 'ಕೈ'ಗೆ ಸೋಲು ಖಚಿತ: ಬಿಜೆಪಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದರೆ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ...
ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದರೆ ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲಲಿದೆ ಎಂದು ಬಿಜೆಪಿ ಹೇಳಿದೆ.
ಒಂದು ವೇಳೆ, ರಾಹುಲ್ ಗಾಂಧಿಯ ನೇತೃತ್ವದಲ್ಲಿ ಕಾಂಗ್ರೆಸ್ ಲೋಕಸಭೆ ಚುನಾವಣೆಯನ್ನು ಎದುರಿಸಿದರೆ ಕಾಂಗ್ರೆಸ್ ಇನ್ನಿಲ್ಲದಂತಹ ಸೋಲು ಕಾಣಲಿದೆ. ಅಲ್ಲದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುವುದಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಯಶ್ವಂತ್ ಸಿನ್ಹಾ ಅವರು ಲೇವಡಿ ಮಾಡಿದ್ದಾರೆ.
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ ಒಂದರಲ್ಲಿ ಅಧಿಕಾರ ಪಡೆಯಲು ಸಾಧ್ಯವಾಗಿದೆ. ಇದನ್ನು ನೋಡಿದರೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ತನ್ನ ಅಸ್ಥಿತ್ವ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸಿನ್ಹಾ ತಿಳಿಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾದರೆ ಕಾಂಗ್ರೆಸ್ ಹೀನಾಯವಾಗಿ ಸೋಲಲಿದೆ ಎಂದು ಅವರು ಹೇಳಿದ್ದಾರೆ. ಆಡಳಿತರೂಢ ಪಕ್ಷ ತನ್ನ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಅಷ್ಟು ಸುಲಭವಲ್ಲ. ಪ್ರತಿಪಕ್ಷಗಳಿಗೆ ಉತ್ತಮ ಪ್ರತಿಸ್ಫರ್ಧೆಯೊಡ್ಡುವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಿರುತ್ತದೆ ಎಂದಿದ್ದಾರೆ.
ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಆಯ್ಕೆಗೊಂಡರು ಅದರಿಂದ ಭಾರತೀಯ ಜನತಾ ಪಕ್ಷಕ್ಕೆ ಯಾವುದೇ ಹಾನಿಯಾಗುವುದಿಲ್ಲ ಎಂದು ಸಿನ್ಹಾ ತಿಳಿಸಿದ್ದು, ವಿಧಾನಸಭೆ ಚುನಾವಣೆಯಲ್ಲಿ ಆದಂತೆ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಮುಖಭಂಗ ಅನುಭವಿಸಲಿದೆ ಎಂದಿದ್ದಾರೆ.