ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಿಕೆಗೆ ಸರ್ವರ ಸಮ್ಮತಿ
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಲು ಸರ್ಕಾರ ಮತ್ತು ವಿಪಕ್ಷಗಳು ನಿರ್ಧರಿಸಿವೆ.
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಲು ಸರ್ಕಾರ ಮತ್ತು ವಿಪಕ್ಷಗಳು ನಿರ್ಧರಿಸಿವೆ.
ವಿಧಾನಸೌಧದಲ್ಲಿ ನಡೆಯುತ್ತಿರುವ ಕಲಾಪದಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸುಪ್ರೀಂ ಕೋರ್ಟ್ ನೀಡಿದ್ದ ಸೂಚನೆಯ ಹಿನ್ನಲೆಯಲ್ಲಿ ಇಂದು ವಿಧಾನಸಭೆಯಲ್ಲಿ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸ್ಥಳೀಯ ಸಂಸ್ಥಗಳ ಚುನಾವಣೆ ಮುಂದೂಡುವ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಚುನಾವಣೆಯನ್ನು 2 ತಿಂಗಳುಗಳ ಕಾಲ ಮುಂದೂಡುವ ಪ್ರಸ್ತಾವಕ್ಕೆ ವಿರೋಧ ಪಕ್ಷಗಳು ಧನಿಗೂಡಿಸಿದವು.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಬಾಲಚಂದ್ರ ಜಾರಕಿಹೊಳಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸರ್ಕಾರ ಮತ್ತು ವಿರೋಧ ಪಕ್ಷಗಳ ಸಮ್ಮತಿಯ ಮೇರೆಗೆ 2 ತಿಂಗಳುಗಳ ಕಾಲ ಮೂಂದೂಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚುನಾವಣೆಯನ್ನು ಮುಂದೂಡುವ ಬಗ್ಗೆ ಸದನದಲ್ಲಿ ಸರ್ವಾನುಮತದ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ 2 ತಿಂಗಳ ನಂತರ ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ತಿಳಿಸಿದರು.