ತಮಿಳುನಾಡಿಗೆ ಮತ್ತೆ ಹರಿದ ಕಾವೇರಿ
ಸುಪ್ರೀಂಕೋರ್ಟ್ ತೀರ್ಪಿನಂತೆ ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿದಿದೆ.
ಮಂಡ್ಯ: ಸುಪ್ರೀಂಕೋರ್ಟ್ ತೀರ್ಪಿನಂತೆ ಕೃಷ್ಣರಾಜ ಸಾಗರ ಅಣೆಕಟ್ಟೆಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿದಿದೆ.
ತಮಿಳುನಾಡಿಗೆ ನೀರು ಬಿಡುವುದಾಗಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ನಿನ್ನೆ ನೀಡಿದ್ದ ಹೇಳಿಕೆಯಂತೆ ಇಂದಿನಿಂದ ಸತತ 8 ದಿನಗಳ ಕಾಲ ತಮಿಳುನಾಡಿಗೆ ಕಾವೇರಿ ನೀರು ಹರಿಯಲಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದ ಕುರಿತಂತೆ ನಿನ್ನೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮತ್ತು ನೀರಾವರಿ ಸಚಿವ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕದ ಪರ ವಕೀಲ ನಾರಿಮನ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು.
ಚರ್ಚೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ತಮಿಳುನಾಡಿಗೆ 2.44 ಟಿಎಂಸಿ ನೀರು ಬಿಡುವುದಾಗಿ ಹೇಳಿದ್ದರು. ಅದರಂತೆ ಇಂದಿನಿಂದ ಸತತ 8 ದಿನಗಳ ಕಾಲ ಒಟ್ಟು 2.44 ಟಿಎಂಸಿ ಕಾವೇರಿ ನೀರು ತಮಿಳುನಾಡಿಗೆ ಹರಿಯಲಿದೆ. ಕೆಆರ್ಎಸ್ನ ಒಟ್ಟು 2 ಕ್ರಸ್ಟ್ ಗೇಟ್ಗಳ ಮೂಲಕ ತಮಿಳುನಾಡಿಗೆ ನೀರು ಹರಿಸಲಾಗುತ್ತಿದ್ದು, ಈಗಾಗಲೇ ಒಟ್ಟು 1500 ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಹರಿದಿದೆ.
ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕಾವೇರಿ ಹಿತರಕ್ಷಣಾ ಸಮಿತಿಯ ಸದಸ್ಯರು ಮತ್ತು ಮಂಡ್ಯ ಜಿಲ್ಲಾ ರೈತರು ಕೆಆರ್ಎಸ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆ ಕೆಆರ್ಎಸ್ಗೆ ನುಗ್ಗಲು ಯತ್ನಿಸಿದ 50 ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ನಡುವೆ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಮಾಜಿ ಮುಖ್ಯಮಂತ್ರಿ ಮತ್ತು ಕೆಜೆಪಿ ಅದ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕಾಲ್ನಡಿಗೆಯಲ್ಲಿ ಕೆಆರ್ಎಸ್ನತ್ತ ಧಾವಿಸುತ್ತಿದ್ದಾರೆ.