ವೈದ್ಯರ 3 ಬೇಡಿಕೆ ಈಡೇರಿಸಿಲು ಒಪ್ಪಿಗೆ
ಸರ್ಕಾರಿ ವೈದ್ಯರ ಮೂರು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಕೊಂಡಿದೆ ಎಂದು ಆರೋಗ್ಯ ಸಚಿವ ಅರವಿಂದ ಲಿಂಬಾವಳಿ...
ಬೆಂಗಳೂರು: ಸರ್ಕಾರಿ ವೈದ್ಯರ ಮೂರು ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಕೊಂಡಿದೆ ಎಂದು ಆರೋಗ್ಯ ಸಚಿವ ಅರವಿಂದ ಲಿಂಬಾವಳಿ ಅವರು ಸೋಮವಾರ ಹೇಳಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯರು ನಡೆಸುತ್ತಿರುವ ಮುಷ್ಕರ ಇಂದು ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು. ವಿಧಾನ ಪರಿಷತ್ನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಲಿಂಬಾವಳಿ, ತಿಂಗಳ ಮೊದಲ ವಾರದಲ್ಲಿ ವೇತನ ನೀಡುವುದು, ವರ್ಗಾಣೆ ಕಾಯ್ದೆ ತಿದ್ದುಪಡಿ ಹಾಗೂ 10 ಜಿಲ್ಲಾಸ್ಪತ್ರೆಗಳನ್ನು ಆರೋಗ್ಯ ಇಲಾಖೆ ವ್ಯಾಪ್ತಿಗೆ ತರುವ ಬೇಡಿಕೆಗಳನ್ನು ನಾವು ಒಪ್ಪಿಕೊಂಡಿದ್ದೇವೆ ಎಂದರು.
ವೈದ್ಯರು ಜನರ ಪ್ರಾಣದ ಜೊತೆ ಚೆಲ್ಲಾಟವಾಡಬಾರದು, ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸದನದ ಮೂಲಕ ವೈದ್ಯರಿಗೆ ಲಿಂಬಾವಳಿ ಮನವಿ ಮಾಡಿದರು.
ಇನ್ನು ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರ ಅವರು, ಲಿಖಿತ ಭರವಸೆ ದೊರೆತ ನಂತರ ಪ್ರತಿಭಟನೆ ಹಿಂಪಡೆಯುವುದಾಗಿ ತಿಳಿಸಿದ್ದಾರೆ.