ಕುಂಭಮೇಳ ಕಾಲ್ತುಳಿತ: ತಪ್ಪಿತಸ್ಥರ ವಿರುದ್ಧ ಕ್ರಮ; ಅಖಿಲೇಶ್
ಕುಂಭಮೇಳದ ವೇಳೆ ಅಲಹಾಬಾದ್ ರೇಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ ಏಳು ಲಕ್ಷ ರುಪಾಯಿ ಪರಿಹಾರ..
ಅಲಹಾಬಾದ್: ಕುಂಭಮೇಳದ ವೇಳೆ ಅಲಹಾಬಾದ್ ರೇಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ ಏಳು ಲಕ್ಷ ರುಪಾಯಿ ಪರಿಹಾರ ನೀಡಿರುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಮೃತರ ಕುಟುಂಬವನ್ನು ಭೇಟಿ ಮಾಡಿ, ಸಾತ್ವಾನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಖಿಲೇಶ್, ಮೃತಪಟ್ಟವರ ಕುಟುಂಬಕ್ಕೆ ತಲಾ 7 ಲಕ್ಷ ರುಪಾಯಿ ಪರಿಹಾರದ ಚೆಕ್‌ನ್ನು ನೀಡಲಾಗಿದೆ. ಇನ್ನು ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.
ಇದೇ ವೇಳೆ ಪ್ರಕರಣದ ತನಿಖೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಅಖಿಲೇಶ್, ಕುಂಭಮೇಳವನ್ನು ಯಾರು ರಾಜಕೀಯಕ್ಕೆ ಬಳಸಬಾರದು ಎಂದರು. ಅಲ್ಲದೆ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.