ಕಾಪ್ಟರ್ ಹಗರಣ: ಮುನ್ನೆಚ್ಚರಿಕೆ ಹೊರತಾಗಿಯೂ ತಪ್ಪು ನಡೆದಿದೆ; ಆಂಟನಿ
ಅತಿ ಗಣ್ಯ ವ್ಯಕ್ತಿಗಳ ಹೆಲಿಕಾಪ್ಟರ್ ಖರೀದಿಗೆ ಸಂಬಂಧಿಸಿದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು.
ನವದೆಹಲಿ: ಅತಿ ಗಣ್ಯ ವ್ಯಕ್ತಿಗಳ ಹೆಲಿಕಾಪ್ಟರ್ ಖರೀದಿಗೆ ಸಂಬಂಧಿಸಿದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. ಅದರೆ ಮುನ್ನೆಚ್ಚರಿಕೆ ಹೊರತಾಗಿಯೂ ತಪ್ಪು ನಡೆದಿದೆ ಎಂದು ರಕ್ಷಣಾ ಸಚಿವ ಎ.ಕೆ.ಆಂಟನಿ ಅವರು ಮಂಗಳವಾರ ವಿಷಾದ ವ್ಯಕ್ತಪಡಿಸಿದ್ದಾರೆ.
ಕಾಪ್ಟರ್ ಹಗರಣದ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆಂಟನಿ, ಕಾಪ್ಟರ್ ಖರೀದಿ ವೇಳೆ ಎಲ್ಲಾ ನಿಯಮಾವಳಿಗಳನ್ನು ಪಾಲಿಸಲಾಗಿತ್ತು. ಆದರು ತಪ್ಪು ನಡೆದಿದೆ. ಆ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ತಪ್ಪಿತಸ್ಥರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಹಗರಣಕ್ಕೆ ಸಂಬಂಧಿಸಿದಂತೆ ಇಟಲಿಯಿಂದ ಇನ್ನೂ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಪ್ರಯತ್ನಿಸುತ್ತಿದ್ದೇವೆ ಮತ್ತು ಈ ಬಗ್ಗೆ ಸಂಸತ್ನಲ್ಲಿ ವಿಸ್ತೃತ ಚರ್ಚೆಗೆ ತಾವು ಸಿದ್ಧರಿರುವುದಾಗಿ ಅವರು ತಿಳಿಸಿದರು.
ಇದೇ ವೇಳೆ ಹಗರಣ ಸಂಬಂಧ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂಬ ಪ್ರತಿಪಕ್ಷ ಬಿಜೆಪಿಯ ಬೇಡಿಕೆಗೆ ಪ್ರತಿಕ್ರಿಯಿಸಿದ ಆಂಟನಿ, ತಾವು ರಾಜಿನಾಮೆ ನೀಡುವುದಿಲ್ಲ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ವರದಿ ಸೇರಿದಂತೆ ಎಲ್ಲವನ್ನೂ ಸಂಸತ್ತಿಗೆ ವಿವರಿಸುವುದಾಗಿ ಹೇಳಿದರು.