ಶಿಂಧೆ ವಿರುದ್ಧ ಪ್ರತಿಭಟನೆ, ಬಿಜೆಪಿ ನಾಯಕರ ಬಂಧನ
ನವದೆಹಲಿ: ಕೇಂದ್ರ ಗೃಹಮಂತ್ರಿ ಸುಶೀಲ್ ಕುಮಾರ್ ಶಿಂಧೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಸೇರಿದಂತೆ, ಪಕ್ಷದ ಹಲವು ಹಿರಿಯ ನಾಯಕರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ.
ಹಿಂದೂ ಭಯೋತ್ಪಾದಕರೂ ಎಂದು ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ವಿರುದ್ಧ ಕಾಂಗ್ರೆಸ್ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿಯ ಅಧ್ಯಕ್ಷ ರಾಜನಾಥ್ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ದೆಹಲಿಯ ಜಂತರ್ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.
ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಬಿಜೆಪಿ ಹಿಂದೂ ಭಯೋತ್ಪಾದನಾ ತರಬೇತಿ ನೀಡುತ್ತಿದೆ ಎಂದು ಶಿಂಧೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿರುವ ಬಿಜೆಪಿ, ಶಿಂಧೆ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದಿದ್ದಾರೆ. ಶಿಂಧೆ ಅವರ ಹೇಳಿಕೆಯನ್ನು ಪಾಕಿಸ್ತಾನ ಸ್ವಾಗತಿಸಿದ್ದು, ಅವರಿಗೆ ಬೆಂಬಲ ನೀಡಿದಂತಾಗಿದೆ ಎಂದು ಬಿಜೆಪಿ ವಕ್ತಾರ ಪ್ರಕಾಶ್ ಜಾವೇದೇಕರ್ ಹೇಳಿದ್ದಾರೆ.