ಕಾವೇರಿ: ನಿರ್ವಹಣಾ ಮಂಡಳಿ ರಚಿಸದಂತೆ ಕೇಂದ್ರಕ್ಕೆ ರಾಜ್ಯ ಮನವಿ
ಕಾವೇರಿ ನೀರು ನಿರ್ವಹಣಾ ಮತ್ತು ನಿಯಂತ್ರಣ ಮಂಡಳಿ ರಚನೆ ಮಾಡದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ..
ನವದೆಹಲಿ: ಕಾವೇರಿ ನೀರು ನಿರ್ವಹಣಾ ಮತ್ತು ನಿಯಂತ್ರಣ ಮಂಡಳಿ ರಚನೆ ಮಾಡದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರ ಬುಧವಾರ ನಿರ್ಧರಿಸಿದೆ.
ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಇಂದು ದೆಹಲಿಯ ಕರ್ನಾಟಕ ಭವನದಲ್ಲಿ ನಡೆಯುತ್ತಿರುವ ರಾಜ್ಯ ಸಂಸದರ ಹಾಗೂ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು, ಮಂಡಳಿ ರಚಿಸದಂತೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ.
ಸಭೆಯಲ್ಲಿ ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ರೆಹಮಾನ್ ಖಾನ್ ಸೇರಿದಂತೆ ರಾಜ್ಯದ 22 ಸಂಸದರು ಭಾಗಿಯಾಗಿದ್ದಾರೆ. ಸಭೆ ಮುಂದುವರೆದಿದ್ದು, ನಾಳೆ ಮಂಡನೆಯಾಗುತ್ತಿರುವ 2013-14ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಹೆಚ್ಚಿನ ನೆರವು ಕೋರುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
ಕಾವೇರಿ ನೀರು ನಿರ್ವಹಣಾ ಮತ್ತು ನಿಯಂತ್ರಣ ಮಂಡಳಿ ರಚಿಸುವ ಸಂಬಂಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಮಂಡಳಿ ರಚಿಸುವ ವಿಚಾರ ಇದೀಗ ಕೇಂದ್ರದ ಕೈಯಲ್ಲಿದೆ. ಹೀಗಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ನಿರ್ಧರಿಸಿದೆ.