ಜಾರ್ಖಂಡ್ನಲ್ಲಿ ರಾಷ್ಟ್ರಪತಿ ಆಡಳಿತ ಜಾರಿ
ನವದೆಹಲಿ: ಬಿಜೆಪಿ ಹಾಗೂ ಜೆಎಂಎಂನ ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ರಾಜಕೀಯ ಅಸ್ಥಿರತೆಯನ್ನು ಎದುರಿಸುತ್ತಿದ್ದ ಜಾರ್ಖಂಡ್ನಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಗುರುವಾರ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ರಾಜಕೀಯ ಪಕ್ಷಗಳು ನೂತನ ಸರ್ಕಾರ ರಚಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಜಾರ್ಖಂಡ್ ವಿಧಾನಸಭೆಯನ್ನು ಅಮಾನತಿನಲ್ಲಿಟ್ಟು, ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ರಾಜ್ಯಪಾಲ ಸೈಯದ್ ಅಹಮದ್ ಅವರು ಕೇಂದ್ರಕ್ಕೆ ಶಿಫಾರಸು ಮಾಡಿದ್ದರು.
ಅರ್ಜುನ್ ಮುಂಡಾ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂತೆಗೆದುಕೊಳ್ಳುವುದಾಗಿ ಹೇಳಿ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಪಕ್ಷವು ರಾಜ್ಯಪಾಲರಿಗೆ ಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ 28 ತಿಂಗಳ ಬಿಜೆಪಿ ಸರ್ಕಾರವು ಅಲ್ಪಮತಕ್ಕೆ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ಮುಂಡಾ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅಲ್ಲದೆ, ವಿಧಾನಸಭೆ ವಿಸರ್ಜಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು.
ಫಲ ನೀಡದ ಪರ್ಯಾಯ ಸರ್ಕಾರದ ಮಾತುಕತೆ
ಮುಂಡಾ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂತೆಗೆದುಕೊಂಡ ಬೆನ್ನಲ್ಲೇ ಪರ್ಯಾಯ ಸರ್ಕಾರ ರಚಿಸುವ ನಿಟ್ಟಿನಲ್ಲೂ ಪ್ರಯತ್ನ ಆರಂಭವಾಗಿತ್ತು. ಆದರೆ ಜೆಎಂಎಂ ಮುಖಂಡರು ಕಾಂಗ್ರೆಸ್ ನಾಯಕರ ಜತೆ ನಡೆಸಿದ ಮಾತುಕತೆ ವಿಫಲವಾಗಿದೆ.