ಗ್ಯಾಂಗ್ ರೇಪ್ ಪ್ರಕರಣ: ದೆಹಲಿ ಹೊರಗೆ ವಿಚಾರಣೆಗೆ ಸುಪ್ರೀಂ ನಕಾರ
ನವದೆಹಲಿ: ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ದೆಹಲಿ ಹೊರಗೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
ಸಾಮೂಹಿಕ ಅತ್ಯಾಚಾರ ವೆಸಗಿದ್ದ ಆರು ಜನರಲ್ಲಿ ಒಬ್ಬ ಆರೋಪಿ ಪರವಾಗಿ ವಕೀಲರು ದೆಹಲಿ ಹೊರಗೆ ವಿಚಾರಣೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿದೆ.
ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಅಲ್ತಮಾಸ್ ಕಬಿರ್ ನೇತೃತ್ವದ ನ್ಯಾಯಾಪೀಠ ಅರ್ಜಿಯನ್ನು ವಜಾಗೊಳಿಸಿದೆ. ಸೆಷನ್ ನ್ಯಾಯಾಲಯ ಸಲ್ಲಿಸಿದ ವರದಿಯನ್ನು ಪರಿಶೀಲಿಸಿದ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದೆ. ಪ್ರಕರಣದ ವಿಚಾರಣೆಯ ವರ್ಗಾವಣೆ ಅರ್ಜಿ ಸಲ್ಲಿಸಲು ಆರೋಪಿ ವಕೀಲ ಎಂ.ಎಲ್ ಶರ್ಮಾ ಅವರಿಗೆ ಅಧಿಕಾರ ನೀಡಿಲ್ಲ ಎಂದು ಸೆಷನ್ ನ್ಯಾಯಾಲಯ ಸಲ್ಲಿಸಿದ ವರದಿಯಲ್ಲಿ ಸ್ಪಷ್ಟವಾಗಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ಹೊರಡಿಸಿದೆ.
ವಕೀಲರಾದ ಎಂ.ಎಲ್ ಶರ್ಮಾ ಮತ್ತು ವಿ.ಕೆ ಆನಂದ್ ಅವರು ಆರೋಪಿ ಮುಖೇಶ್ ಅವರನ್ನು ಪ್ರತಿನಿಧಿಸುತ್ತಿರುವುದಾಗಿ ಹೇಳಿ ಪ್ರಕರಣದ ವಿಚಾರಣೆಯನ್ನು ವರ್ಗಾಯಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರಿಂದ ವಿವಾದ ಉಂಟಾಗಿತ್ತು.
ಶರ್ಮಾ ಅವರಿಗೆ ವರ್ಗಾವಣೆ ಅರ್ಜಿ ಸಲ್ಲಿಸಲು ಆರೋಪಿ ಅಧಿಕಾರ ನೀಡಿಲ್ಲ ಎಂದು ಸೆಷನ್ ನ್ಯಾಯಾಲಯ ಹೇಳಿದ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.