ಬಿಜೆಪಿಯ ಮತ್ತೊಂದು ವಿಕೆಟ್ ಪತನ, ಸುರೇಶ್ ರಾಜಿನಾಮೆ
ಬಿಜೆಪಿಯ ಮತ್ತೊಂದು ವಿಕೆಟ್ ಶುಕ್ರವಾರ ಪತನಗೊಂಡಿದ್ದು, ಸರ್ಕಾರ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ....
ಬೆಂಗಳೂರು: ಬಿಜೆಪಿಯ ಮತ್ತೊಂದು ವಿಕೆಟ್ ಶುಕ್ರವಾರ ಪತನಗೊಂಡಿದ್ದು, ಸರ್ಕಾರ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.
ತರೀಕೆರೆ ಶಾಸಕ ಡಿ.ಎಸ್. ಸುರೇಶ್ ಅವರು ಬಿಜೆಪಿಗೆ ಗುಡ್‌ಬೈ ಹೇಳಿದ್ದು, ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸ್ಪೀಕರ್ ಕಚೇರಿಗೆ ತೆರಳಿ ರಾಜಿನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್, ತಾವು ಸ್ಪೀಕರ್ ಕೆ.ಜಿ.ಬೋಪಯ್ಯ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ರಾಜಿನಾಮೆ ಪತ್ರವನ್ನು ವಿಧಾಸಭೆ ಕಾರ್ಯದರ್ಶಿಯವರೆಗೆ ಸಲ್ಲಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ರಾಜಿನಾಮೆಯನ್ನು ಕಾರ್ಯದರ್ಶಿಯವರಿಗೆ ಸಲ್ಲಿಸಿರುವುದಾಗಿ ತಿಳಿಸಿದರು.
ಇದೇ ವೇಳೆ, ತಮ್ಮ ರಾಜಿನಾಮೆ ಅಂಗೀಕಾರವಾದ ಬಳಿಕ ಬಿಜೆಪಿ ಸದಸ್ಯತ್ವಕ್ಕೂ ರಾಜಿನಾಮೆ ನೀಡುವುದಾಗಿ ಸುರೇಶ್ ಹೇಳಿದರು.
ಜನವರಿ 23ರಂದು 13 ಶಾಸಕರೊಂದಿಗೆ ರಾಜಿನಾಮೆ ನೀಡಲು ವಿಧಾನಸೌಧಕ್ಕೆ ಆಗಮಿಸಿದ್ದ ಸುರೇಶ್, ನಂತರ 29ರಂದು ಶಿರಡಿಗೆ ತೆರಳಿದ್ದರು. ಈ ಮಧ್ಯೆ ಸುರೇಶ್ ಅವರು ರಾಜಿನಾಮೆಯಿಂದ ಹಿಂದೆ ಸರಿದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಇದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಿಟ್ಟಿಗೆ ಕಾರಣವಾಗಿತ್ತು.