ಸ್ಥಳೀಯ ಸಂಸ್ಥೆಗಳ ಮೀಸಲಾತಿ: ಸುಪ್ರೀಂನಿಂದ ಸರ್ಕಾರದ ಅರ್ಜಿ ವಜಾ
ಸ್ಥಳೀಯ ಸಂಸ್ಥೆಗಳ ಚುನಾವಣಾ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನೆಡೆಯಾಗಿದ್ದು, ಹೈಕೋರ್ಟ್ ಆದೇಶ ಪ್ರಶ್ನಿಸಿ...
ನವದೆಹಲಿ: ಸ್ಥಳೀಯ ಸಂಸ್ಥೆಗಳ ಚುನಾವಣಾ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನೆಡೆಯಾಗಿದ್ದು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಈ ಸಂಬಂಧ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ನಿಗದಿಯಂತೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ಸೂಚಿಸಿದೆ.
ಫೆಬ್ರುವರಿ 3ರೊಳಗೆ ಅಂಕಿ, ಅಂಶಗಳನ್ನೊಳಗೊಂಡ ಅಂತಿಮ ಮೀಸಲಾತಿ ಪಟ್ಟಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಅಲ್ಲದೆ ಒಂದು ವೇಳೆ ಮೀಸಲು ಪಟ್ಟಿ ನೀಡದಿದ್ದರೆ, ಹಳೆಯ ಪದ್ಧತಿಯಂತೆ ಕರ್ನಾಟಕದ 187 ಸ್ಥಳೀಯ ಸಂಸ್ಥೆಗಳ ಚುನಾವಣೆ 2001ರ ಜನಗಣತಿ ಆಧಾರದ ಮೇಲೆ ನಡೆಸುವಂತೆ ನಿರ್ದೇಶಿಸಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೀಸಲು ಪಟ್ಟಿ ಸಲ್ಲಿಸುವಂತೆ ಹೈಕೋರ್ಟ್ ಆದೇಶಿಸಿತ್ತು. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಶತಾಯ ಗತಾಯ ಮುಂದೂಡುವ ಪ್ರಯತ್ನದಿಂದ ರಾಜ್ಯ ಸರ್ಕಾರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.