ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಗ್ಗಂಟಾದ ಭಾಷಾ ಮಾಧ್ಯಮ, ಪ್ರಕರಣ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ

ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸುವ ಸಂಬಂಧ ಉಂಟಾಗಿರುವ ವಿವಾದ..

Lingaraj Badiger
Updated On : 5 Jul 2013, 1:57 am

ನವದೆಹಲಿ: ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯಗೊಳಿಸುವ ಸಂಬಂಧ ಉಂಟಾಗಿರುವ ವಿವಾದ ಸದ್ಯಕ್ಕೆ ತಾರ್ಕಿಕ ಅಂತ್ಯ ಕಾಣದೆ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆಯಾಗಿದೆ.

19 ವರ್ಷಗಳ ಹಿಂದೆ ಜಾರಿಗೊಳಿಸಿದ್ದ ಭಾಷಾ ನೀತಿಯ ಔಚಿತ್ಯದ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಬೇಕಿತ್ತು. ಆದರೆ ತೀರ್ಪು ನೀಡುವ ಬದಲು ಸುಪ್ರೀಂ ಕೋರ್ಟ್ ಪ್ರಕರಣದ ಕುರಿತು ಐದು ಪ್ರಶ್ನೆಗಳನ್ನು ಕೇಳಿ ಆ ಬಗ್ಗೆ ಸ್ಪಷ್ಟನೇ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಅಲ್ಲದೆ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿ, ಸಾಂವಿಧಾನಿಕ ಪೀಠ ಈ ವಿಷಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದೆ.

2008, ಜುಲೈ 2ರಂದು ಭಾಷಾ ಮಾಧ್ಯಮ ನೀತಿಯನ್ನು ಖಾಸಗಿ ಶಾಲೆಗಳ ಮೇಲೆ ಹೇರಲು ಬರುವುದಿಲ್ಲ ಎಂದು ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಪಿ.ಸದಾಶಿವಂ ನೇತೃತ್ವದ ಪೀಠ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

ಇಂದು ತೀರ್ಪು ಪ್ರಕಟಿಸುವ ಬದಲು ಸ್ಪಷ್ಟನೇ ಕೇಳಿ, ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಿದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪಿ. ಸದಾಶಿವಂ ಅವರು, ಈಗ ನಾವು ವ್ಯತಿರಿಕ್ತ ತೀರ್ಪು ನೀಡುವುದು ಸರಿಯಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ 1994ರಲ್ಲಿ ಎಲ್ಲ ಖಾಸಗಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ನೀಡಬೇಕು ಎಂದು ಆದೇಶಿಸಿತ್ತು. ಆದರೆ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಖಾಸಗಿ ಶಾಲೆಗಳು ಕೋರ್ಟ್ ಮೆಟ್ಟಿಲೇರಿದ್ದವು.

ಸುಪ್ರೀಂ ಕೋರ್ಟ್ ಕೇಳಿದ 5 ಸ್ಪಷ್ಟನೆಗಳು
1. ಮಾತೃ ಭಾಷೆ ಎಂದರೆ ಏನು? ಆಯಾ ರಾಜ್ಯದ ಪ್ರಾದೇಶಿಕ ಭಾಷೆಯೇ ಅಥವಾ ಮಕ್ಕಳ ಮಾತೃಬಾಷೆಯೇ?
2. ಮಾತೃ ಭಾಷೆ ನಿರ್ಧರಿಸುವುದು ಯಾರು? ಸರ್ಕಾರವೇ, ಪಾಲಕರೇ ಅಥವಾ ಮಕ್ಕಳೇ?
3. ಮಾತೃ ಭಾಷೆ ಹೇರುವುದರಿಂದ ಸಂವಿಧಾನದ ಕಲಂ 19(ಜಿ) ಉಲ್ಲಂಘನೆಯಾಗುತ್ತದೆಯೇ?
4. ಕಲಂ 350ಎ ಪ್ರಕಾರ, ರಾಜ್ಯ ಸರ್ಕಾರಕ್ಕೆ ಶಿಕ್ಷಣ ಸಂಸ್ಥೆಗಳ ಮೇಲೆ ಭಾಷೆ ಕಡ್ಡಾಯಗೊಳಿಸುವ ಹಕ್ಕು ಇದೆಯೇ?
5. 1994ರ ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ವಿಮರ್ಶೆ ಮಾಡಬೇಕೆ ಅಥವಾ ಬೇಡವೇ?

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement