ಸಿಕಂದರಾಬಾದ್ನಲ್ಲಿ ಹೋಟೆಲ್ ಕುಸಿತ: 11 ಸಾವು
ಸಿಕಂದರಾಬಾದ್ನಲ್ಲಿರುವ ಹೋಟೆಲ್ವೊಂದು ಕುಸಿದು ಬಿದ್ದ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ ಮತ್ತು 15ಕ್ಕೂ..
ಹೈದರಾಬಾದ್: ಸಿಕಂದರಾಬಾದ್ನಲ್ಲಿರುವ ಹೋಟೆಲ್ವೊಂದು ಕುಸಿದು ಬಿದ್ದ ಪರಿಣಾಮ 11 ಮಂದಿ ಮೃತಪಟ್ಟಿದ್ದಾರೆ ಮತ್ತು 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಿಕಂದರಬಾದ್ನ ರಾಷ್ಟ್ರಪತಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಸಿಟಿ ಲೈಟ್ ಹೋಟೆಲ್ನ ಕಟ್ಟಡ ಇಂದು ಬೆಳಗಿನ ಜಾವ 6.30ರ ಸುಮಾರಿಗೆ ಕುಸಿದು ಬಿದ್ದಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ 20 ಮಂದಿಯನ್ನು ರಕ್ಷಿಸಿದ್ದಾರೆ ಮತ್ತು ಗಾಯಗೊಂಡ 15 ಮಂದಿಯನ್ನು ಸರ್ಕಾರಿ ಆಸ್ಪತ್ರೆ ದಾಖಲು ಮಾಡಿದ್ದಾರೆ. ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಕಿರಣ್ ಕುಮಾರ್ ರೆಡ್ಡಿ ಅವರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಮತ್ತು ಗಾಯಗೊಂಡವರಿಗೆ ತಕ್ಷಣ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕಟ್ಟಡದ ಅವಶೇಷಗಳಡಿಯಿಂದ ಈವರೆಗೆ 11 ಮೃತ ದೇಹಗಳನ್ನು ಹೊರ ತೆಗೆದಿದ್ದೇವೆ ಮತ್ತು ಇನ್ನು 20 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೈದರಾಬಾದ್ ಪೊಲೀಸ್ ಆಯುಕ್ತ ಅನುರಾಗ್ ಶರ್ಮಾ ಅವರು ವರದಿಗಾರರಿಗೆ ತಿಳಿಸಿದ್ದಾರೆ.