ಈ ತಿಂಗಳ ಅಂತ್ಯಕ್ಕೆ ಮೋದಿ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ?
ಯಾರ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಬೇಕು ಎಂಬ ಬಗ್ಗೆ ಬಿಜೆಪಿಯಲ್ಲಿ ಉಂಟಾಗಿದ್ದ ಬಿಕ್ಕಟ್ಟು...
ನವದೆಹಲಿ: ಯಾರ ನೇತೃತ್ವದಲ್ಲಿ ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸಬೇಕು ಎಂಬ ಬಗ್ಗೆ ಬಿಜೆಪಿಯಲ್ಲಿ ಉಂಟಾಗಿದ್ದ ಬಿಕ್ಕಟ್ಟು ಇದೀಗ ತಾರ್ಕೀಕ ಅಂತ್ಯ ಕಂಡಿದೆ. ಈಗಾಗಲೇ ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿತರಾಗಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಹೆಸರನ್ನೇ ಈ ತಿಂಗಳ ಅಂತ್ಯಕ್ಕೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ.
ಯಾವುದೇ ಕ್ಷಣದಲ್ಲೂ ಲೋಕಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಬಿಜೆಪಿ ಸಂಸದೀಯ ಮಂಡಳಿ ಜುಲೈ ಅಂತ್ಯದ ವೇಳೆಗೆ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ರಾಷ್ಟ್ರಿಯ ಸ್ವಯಂ ಸೇವಕ(ಆರ್ಎಸ್ಎಸ್) ಸಂಘ ಸಹ ಇದಕ್ಕೆ ಈಗಾಗಲೇ ಒಪ್ಪಿಗೆ ಸೂಚಿಸಿದೆ. ಇನ್ನು ಮೋದಿ ಅವರ ಆಯ್ಕೆಯನ್ನು ವಿರೋಧಿಸಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಅವರನ್ನು ಮನವೊಲಿಸುವಲ್ಲಿ ಸಂಘ ಸಕ್ರಿಯವಾಗಿದೆ ಎನ್ನಲಾಗಿದೆ.
ಕಳೆದು ತಿಂಗಳು ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮೋದಿ ಅವರನ್ನು ಆಯ್ಕೆ ಮಾಡಲಾಗಿತ್ತು. ಇದೀಗ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ಮೋದಿ ಅವರ ಸ್ಥಾನಮಾನದ ಬಗೆಗಿನ ಗೊಂದಲಗಳಿಗೆ ತೆರೆ ಎಳೆಯಲು ಬಿಜೆಪಿ ಮುಂದಾಗಿದೆ.
ಅಲ್ಲದೆ ಮೋದಿ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಅಲೆ ಸೃಷ್ಟಿಸುವ ಸಾಮರ್ಥ್ಯವಿದೆ ಎಂದು ಹಲವು ನಾಯಕರು ನಂಬಿರುವುದರಿಂದ ಅವರನ್ನೆ ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಪಕ್ಷ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮೋದಿ ಮಧ್ಯ ಜಿದ್ದಾಜಿದ್ದಿನ ಹೋರಾಟ ನಡೆಯುವ ಸಾಧ್ಯತೆ ಇದೆ.