ಹೈಕಮಾಂಡ್ ಬಾಯಿಗೆ ಬೀಗ ಹಾಕಿದೆ: ಡಿಕೆಶಿ
ಡಿ.ಕೆ.ಶಿವಕುಮಾರ್ ಅವರು ಸಚಿವರಾಗಬೇಕಿತ್ತು ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ..
ನವದೆಹಲಿ: ಡಿ.ಕೆ.ಶಿವಕುಮಾರ್ ಅವರು ಸಚಿವರಾಗಬೇಕಿತ್ತು ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಮಂಗಳವಾರ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಡಿಕೆಶಿ, ಕುಮಾರಸ್ವಾಮಿಯವರು ತಮ್ಮ ಅಭಿಪ್ರಾಯ ಹೇಳಿದ್ದಾರೆ ಅಷ್ಟೆ ಎಂದಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರು ತಮ್ಮ ಅಭಿಪ್ರಾಯವನ್ನು ಬಹಿರಂಗವಾಗಿ ವ್ಯಕ್ತಪಡಿಸಬಹುದು. ಅದನ್ನು ತಡೆಯುವ ಶಕ್ತಿ ನನಗೆ ಇಲ್ಲ ಎಂದು ಸಚಿವ ಸ್ಥಾನ ವಂಚಿತ ಡಿಕೆಶಿ ತಿಳಿಸಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಕ್ಕಲಿಗ ರಾಜಕಾರಣಿಗಳನ್ನು, ಅಧಿಕಾರಿಗಳನ್ನು ಕಡೆಗಣಿಸುತ್ತಿದ್ದಾರೆ ಮತ್ತು ಜಾತಿ ರಾಜಕೀಯ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿಲು ನಿರಾಕರಿಸಿದ ಡಿಕೆಶಿ, ಸದ್ಯಕ್ಕೆ ನನ್ನ ಬಾಯಿಗೆ ಬೀಗ ಹಾಕಿಕೊಂಡಿದ್ದೇನೆ ಮತ್ತು ಹೈಕಮಾಂಡ್ ಸಹ ಒಂದು ಬೀಗ ಹಾಕಿದೆ ಎಂದು ಹೇಳಿದ್ದಾರೆ.
ಇನ್ನು ಎಚ್ಡಿಕೆ ಆರೋಪಕ್ಕೆ ನಿನ್ನೆ ತಿರುಗೇಟು ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾನು ಜಾತಿ ರಾಜಕಾರಣ ಮಾಡಿ ಮುಖ್ಯಮಂತ್ರಿಯಾಗಿಲ್ಲ. ಆ ಕೆಲಸ ಯಾರು ಮಾಡುತ್ತಿದ್ದಾರೆ ಎಂಬುದು ರಾಜ್ಯದ ಜನತೆಗೆ ಗೊತ್ತು. ಒಂದೇ ಜಾತಿ ಹಾಗೂ ವರ್ಗದಿಂದ ಯಾವ ರಾಜಕಾರಣಿಯೂ ಬೆಳೆಯುವುದಕ್ಕೆ ಸಾಧ್ಯವಿಲ್ಲ ಎಂದಿದ್ದರು. ಅಲ್ಲದೆ ಒಕ್ಕಲಿಗ ರಾಜಕಾರಣಿಗಳನ್ನು ಮತ್ತು ಅಧಿಕಾರಿಗಳನ್ನು ತಾವು ಕಡೆಗಣಿಸಿಲ್ಲ ಎಂದು ಸ್ಪಷ್ಟಪಡಿಸಿದ್ದರು.