ಆ.20ಕ್ಕೆ ಆಹಾರ ಭದ್ರತೆ ಯೋಜನೆಗೆ ಚಾಲನೆ
ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುಪಿಎ ಸರ್ಕಾರದ ಆಹಾರ ಭದ್ರತೆ ಯೋಜನೆಯನ್ನು..
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುಪಿಎ ಸರ್ಕಾರದ ಆಹಾರ ಭದ್ರತೆ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಶನಿವಾರ ಸೂಚಿಸಿದ್ದಾರೆ.
ದೇಶದ 82 ಕೋಟಿ ಜನತೆಗೆ ಕಡಿಮೆ ಬೆಲೆಯಲ್ಲಿ ಆಹಾರ ಧಾನ್ಯಗಳನ್ನು ಒದಗಿಸುವ ಆಹಾರ ಭದ್ರತೆ ಯೋಜನೆಯನ್ನು ಜಾರಿಗೊಳಿಸುವುದು ಹೇಗೆ ಎಂಬುದರ ಬಗ್ಗೆ ಚರ್ಚಿಸಿಲು ಸೋನಿಯಾ ಇಂದು ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆ ಕರೆದಿದ್ದರು.
ಯುಪಿಎ ಸರ್ಕಾರದ ಬಹು ನಿರೀಕ್ಷಿತ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತನ್ನಿ, ಈ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಪತ್ರದ ಮೂಲಕ ತಿಳಿಸುವಂತೆ ಸೋನಿಯಾ ಗಾಂಧಿ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈ ವರ್ಷದ ಅಂತ್ಯಕ್ಕೆ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಆದಷ್ಟು ಬೇಗ ಈ ಯೋಜನೆಯನ್ನು ಜಾರಿಗೆ ತರಲು ಕಾಂಗ್ರೆಸ್ ನಿರ್ಧರಿಸಿದ್ದು, ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರ ಜನ್ಮ ದಿನವಾದ ಆಗಸ್ಟ್ 20ರಂದೆ ಆಹಾರ ಭದ್ರತೆ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಆಹಾರ ಖಾತೆ ಸಚಿವ ಕೆ.ವಿ.ಥಾಮಸ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಿದ್ದರು.
ಇನ್ನು ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ತಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಆಹಾರ ಭದ್ರತೆ ಯೋಜನೆ ನೆರವಾಗಲಿದೆ. ಹೀಗಾಗಿ ಶೀಘ್ರದಲ್ಲೇ ಆಹಾರ ಭದ್ರತೆ ಯೋಜನೆಯನ್ನು ರಾಜ್ಯದಲ್ಲೂ ಜಾರಿಗೆ ತರಲಾಗುವುದು ಎಂದು ಹೇಳಿದರು.