ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಪ್ರಧಾನಿ
ನವದೆಹಲಿ: ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಆರ್ಥಿಕತೆ ಸುಧಾರಣೆಗೆ ಸೂಕ್ತ ಕ್ರಮಗಳನ್ನು ಶೀಘ್ರದಲ್ಲೇ ಕೈಗೊಳ್ಳುವುದಾಗಿ ಪ್ರಧಾನಿ ಮನಮೋಹನ್ ಸಿಂಗ್ ಶುಕ್ರವಾರ ತಿಳಿಸಿದ್ದಾರೆ.
ಇಂದು ಉದ್ಯಮ ಕ್ಷೇತ್ರದ ವಾರ್ಷಿಕ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾಲರ್ ಎದುರು ರುಪಾಯಿ ಮೌಲ್ಯ ಸತತ ಕುಸಿಯುತ್ತಿರುವದರಿಂದ ಆರ್ಥಿಕ ಮುಗ್ಗಟ್ಟು ಸೃಷ್ಟಿಯಾಗಿದೆ. ಹೀಗಾಗಿ ದೇಶದ ಪ್ರಮುಖ ಉದ್ಯಮಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಜಾಗತಿಕ ಮಟ್ಟದಲ್ಲಿ ರುಪಾಯಿ ಅಪಮೌಲ್ಯಗೊಂಡಿದೆ. ಇದರಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಕುಂಠಿತಗೊಂಡಿದ್ದು, ಪರಿಸ್ಥಿತಿ ಸುಧಾರಣೆಗೆ ಭಾರತೀಯ ರಿಸರ್ವ ಬ್ಯಾಂಕ್ ಸಹ ಸ್ವದೇಶಿ ಬಂಡವಾಳವನ್ನು ಭದ್ರಪಡಿಸುವ ಮೂಲಕ ರುಪಾಯಿ ಮೌಲ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.
ಸದ್ಯ ಆರ್ಥಿಕ ವ್ಯವಸ್ಥೆಯ ಮೂಲಪರಿಸ್ಥಿತಿ ಉತ್ತಮವಾಗಿದೆ. ಆದರೆ ಪ್ರಸ್ತುತ ವಾರ್ಷಿಕ ಸ್ಥಿತಿಗತಿಯಲ್ಲಿ ಎರುಪೇರು ಉಂಟಾಗಿದೆ. ಹೀಗಾಗಿ ಆರ್ಥಿಕಸ್ಥಿತಿ 6.5ಕ್ಕೆ ಕುಸಿದಿದೆ. ಮುಂದಿನ ಬಜೆಟ್ ವೇಳೆಗೆ ಪರಿಸ್ಥಿತಿ ಸುಧಾರಣೆಗೆ ಬೇಕಾದ ಎಲ್ಲ ರೀತಿಯ ಕ್ರಮಕೈಗೊಳ್ಳುಲಾಗುವುದು ಎಂದು ಪ್ರಧಾನಿ ಭರವಸೆ ನೀಡಿದರು.