ಒಮ್ಮತದಿಂದ ಪ್ರಧಾನಿ ಅಭ್ಯರ್ಥಿ ಆಯ್ಕೆ: ರಾಜನಾಥ್ ಸಿಂಗ್
ಪ್ರಧಾನಿ ಸ್ಥಾನಕ್ಕಾಗಿ ನಮ್ಮ ಪಕ್ಷದಲ್ಲಿ ಯಾವುದೇ ಸ್ಪರ್ಧೆ ಇಲ್ಲ ಎಂದು ಹೇಳಿರುವ ಬಿಜೆಪಿ ಅಧ್ಯಕ್ಷ ರಾಜನಾಥ್..
ವಾಷಿಂಗ್ಟನ್: ಪ್ರಧಾನಿ ಸ್ಥಾನಕ್ಕಾಗಿ ನಮ್ಮ ಪಕ್ಷದಲ್ಲಿ ಯಾವುದೇ ಸ್ಪರ್ಧೆ ಇಲ್ಲ ಎಂದು ಹೇಳಿರುವ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್ ಅವರು, ಸಂಸದೀಯ ಮಂಡಳಿ ಸಭೆಯಲ್ಲಿ ಆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬುಧವಾರ ಹೇಳಿದ್ದಾರೆ.
ಅಮೆರಿಕ ಪ್ರವಾಸದಲ್ಲಿರುವ ಸಿಂಗ್ ನಿನ್ನೆ ಮಾಧ್ಯಮ ಸಂವಾದದಲ್ಲಿ ಮಾತನಾಡಿದರು. ಈ ವೇಳೆ, ಪ್ರಧಾನಿ ಅಥವಾ ಮುಖ್ಯಮಂತ್ರಿ ಸ್ಥಾನಕ್ಕೆ ಯಾರನ್ನು ಬಿಂಬಿಸಬೇಕು ಎಂಬುದರ ಬಗ್ಗೆ ಸಂಸದೀಯ ಮಂಡಳಿಯಲ್ಲೇ ನಿರ್ಧಾರವಾಗಬೇಕು ಎಂಬುದು ಪಕ್ಷದ ನಿಯಮ. ಹೀಗಾಗಿ ಸಂಸದೀಯ ಮಂಡಳಿಯಲ್ಲೇ ಪ್ರಧಾನಿ ಅಭ್ಯರ್ಥಿ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಯಾವುದೇ ಅನುಮಾನ ಬೇಡ. ಸಂಸದೀಯ ಮಂಡಳಿಯ ಅಧ್ಯಕ್ಷ ನಾನೇ, ಆದರೆ ಆ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಈಗಾಗಲೇ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಂಗ್, ಮೋದಿ ದೇಶದ ಅತ್ಯಂತ ಜನಪ್ರಿಯ ನಾಯಕ. ಆದರೆ ಪ್ರಧಾನಿ ಅಭ್ಯರ್ಥಿ ಬಗ್ಗೆ ಇನ್ನು ಯಾವುದೇ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಸಂಬಂಧ ಸೂಕ್ತ ಸಮಯದಲ್ಲಿ ಸಂಸದೀಯ ಮಂಡಳಿ ಸಭೆ ಕರೆಯುತ್ತೇನೆ. ಆ ಸಭೆಯಲ್ಲಿ ಏನೇ ನಿರ್ಧಾರ ತೆಗೆದುಕೊಂಡರೂ, ಅದು ಒಮ್ಮತದ ನಿರ್ಧಾರವಾಗಿರುತ್ತದೆ ಎಂದು ಸಿಂಗ್ ತಿಳಿಸಿದರು.